
ನವದೆಹಲಿ, ಜು. ೧೯- ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸಂಸತ್ತಿನ ಉಭಯ ಸದನಗಳ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜಂಟಿಯಾಗಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದು, ಟ್ರಸ್ಟ್‌ನ ಹಣಕಾಸು ವ್ಯವಹಾರಗಳ ಬಗ್ಗೆ ಸಮಗ್ರ ಹಾಗೂ ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದಾರೆ.
ಟ್ರಸ್ಟ್‌ಗೆ ಹರಿದುಬಂದಿರುವ ನಗದು, ಚಿನ್ನ ಹಾಗೂ ಬೆಳ್ಳಿ ಸೇರಿದಂತೆ ಎಲ್ಲಾ ರೀತಿಯ ಕಾಣಿಕೆಗಳ ನಿರ್ವಹಣೆ ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ತಕ್ಷಣವೇ ಸ್ವತಂತ್ರ ಮತ್ತು ಸಮಗ್ರ ತನಿಖೆಗೆ ಆದೇಶಿಸಬೇಕು. ತನಿಖೆಯ ವರದಿ ಹಾಗೂ ಟ್ರಸ್ಟ್‌ನ ಸಂಪೂರ್ಣ ಲೆಕ್ಕಪತ್ರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಆ ಮೂಲಕ ಭಕ್ತರು ತಾವು ನೀಡಿದ ಕೊಡುಗೆಗಳು ಹೇಗೆ ಬಳಕೆಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ನಾಯಕರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕಳೆದ ತಿಂಗಳು ರಾಮ ಮಂದಿರದ ದೇಣಿಗೆಯಲ್ಲಿ ಭಾರಿ ಪ್ರಮಾಣದ ದುರುಪಯೋಗ ನಡೆದಿರುವ ಆರೋಪಗಳು ಕೇಳಿಬಂದಿದ್ದವು. ಈ ವಿವಾದದ ತೀವ್ರತೆಯನ್ನು ಪರಿಗಣಿಸಿ, ಉತ್ತರ ಪ್ರದೇಶ ಸರ್ಕಾರವು ಜೂನ್ ೧೩ ರಂದು ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಇದೀಗ ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಮಟ್ಟದ ಸ್ವತಂತ್ರ ತನಿಖೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ.


































