
ಬೆಂಗಳೂರು.ಆ.೨೫- ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕಳೆದ ಮೂರು ದಿನಗಳಿಂದ ಮಲೆನಾಡು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ವರ್ಷಧಾರೆ ಮುಂದುವರೆದಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು,ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ತಿಳಿಸಿದೆ.
ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮವಾಗಿ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ ಈ ಋತುವಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ.
ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ರಾತ್ರಿಯಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ. ಮಳೆಯ ಆರ್ಭಟ ಮುಂದುವರಿದಿರುವುದರಿಂದ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ. ಕಾಫಿ ತೋಟಗಳಲ್ಲಿ ಹೂವು ಹಾಗೂ ಕಾಯಿಗಳು ಉದುರುವ ಸಾಧ್ಯತೆ ಇದ್ದು, ನಿರಂತರ ಮಳೆಯಿಂದ ಬೆಳೆಗಾರರು ಚಿಂತೆಗೆ ಒಳಗಾಗಿದ್ದಾರೆ.
































