
ಕಲಬುರಗಿ,ಏ.06:ದೇಶವು ಆಹಾರದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ದೇಶದ ಹಸಿವನ್ನು ನೀಗಿಸಿದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ಭಾನುವಾರ ನಗರದ ಇಂದಿರಾ ಸ್ಮಾರಕ ಭವನದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಭಾರತದ ಮಾಜಿ ಉಪ ಪ್ರಧಾನಿ, ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ರವರ 119 ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತವು ಹಸಿವಿನಿಂದ ಬಳಲುತ್ತಿದ್ದ ಕಾಲದಲ್ಲಿ ಕೃಷಿ ಸಚಿವರಾಗಿ ಡಾ. ಬಾಬು ಜಗಜೀವನರಾಂ ಅವರು ತಂದ ಕ್ರಾಂತಿಕಾರಿ ಬದಲಾವಣೆಗಳಿಂದಾಗಿ ಇಂದು ನಾವು ಆಹಾರ ರಫ್ತು ಮಾಡುವ ಹಂತಕ್ಕೆ ತಲುಪಿದ್ದೇವೆ. ಅವರು ಈ ದೇಶದ ಪಾಲಿಗೆ ನಿಜವಾದ ಅನ್ನದಾತ ಎಂದು ತಿಳಿಸಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರ ನಂತರ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಸಂಸತ್ತಿನಲ್ಲಿ ಪ್ರಬಲವಾಗಿ ಧ್ವನಿ ಎತ್ತಿದವರು ಬಾಬುಜೀ. ಅವರ ಹೋರಾಟ ಮತ್ತು ದಕ್ಷ ಆಡಳಿತ ಯುವ ಪೀಳಿಗೆಗೆ ಮಾದರಿ. ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರು” ಎಂಬ ಅಂಬೇಡ್ಕರ್ ಅವರ ಮಾತಿನಂತೆ, ಮಹಾನ್ ಪುರುಷರ ಸಾಧನೆಗಳನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ಕೇವಲ ಭಾಷಣಕ್ಕೆ ಸೀಮಿತವಾಗದೆ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್ ಅವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಏಕೈಕ ದಾರಿ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಅವರು ತೋರಿದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೆÇೀಷಕರ ಮೊದಲ ಆದ್ಯತೆಯಾಗಬೇಕು. ಶಿಕ್ಷಣವಂತರಾದಾಗ ಮಾತ್ರ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
ನಮ್ಮಲ್ಲಿ ಒಗ್ಗಟ್ಟಿದ್ದರೆ ಮಾತ್ರ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ಭಿನ್ನಾಭಿಪ್ರಾಯಗಳನ್ನು ಮರೆತು ನಾವೆಲ್ಲರೂ ಒಂದಾಗಿ ಸಮಾಜದ ಏಳಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರದ ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳು ಬಡವರು ಹಾಗೂ ದೀನದಲಿತರ ಬಾಳಿಗೆ ಆಸರೆಯಾಗಿವೆ. ಈ ಯೋಜನೆಗಳಿಂದ ಅನೇಕ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ ಬಾಬುಜಿಯವರು ದೇಶದ ಹಸಿರು ಕ್ರಾಂತಿಯ ಹರಿಕಾರರು. ಕೃಷಿ ಸಚಿವರಾಗಿ ಅವರು ತಂದ ಸುಧಾರಣೆಗಳು ಭಾರತವನ್ನು ಆಹಾರದ ಸ್ವಾವಲಂಬನೆಯತ್ತ ಕೊಂಡೊಯ್ದವು. ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಅವರ ಕೊಡುಗೆ ಅಪಾರ ಎಂದು ಹೇಳಿದರು.
ಕಾರ್ಮಿಕ, ರಕ್ಷಣೆ ಮತ್ತು ಸಂವಹನ ಕ್ಷೇತ್ರಗಳಲ್ಲಿ ಅವರು ನೀಡಿದ ಸುದೀರ್ಘ ಸಂಸದೀಯ ಸೇವೆಯನ್ನು ಸ್ಮರಿಸಬೇಕು, ಬಾಬುಜಿಯವರ ಶಿಸ್ತು ಮತ್ತು ರಾಷ್ಟ್ರಪ್ರೇಮದ ಹಾದಿ ಇಂದಿನ ಯುವಜನತೆಗೆ ದಾರಿದೀಪವಾಗಿದೆ ಎಂದು ತಿಳಿಸಿದರು.
ಕೊಡ್ಲಿ ರಾಣಿ ಚನ್ನಮ ವಸತಿ ಶಾಲೆಯ ಪ್ರಾಚಾರ್ಯ ರಾಜಶೇಖರ ಮಾಂಗ ವಿಶೇಷ ಉಪನ್ಯಾಸ ನೀಡಿದ ಅವರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಬಾಬೂಜಿ ಅಂತಹ ಮಹಾನ್ ದಾರ್ಶನಿಕರ ತತ್ವಗಳು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಅವರ ಜೀವನದ ಮೌಲ್ಯಗಳನ್ನು ನಾವು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಾ. ಬಾಬು ಜಗಜೀವನರಾಂ ಹೋರಾಟದ ಹಾದಿಯನ್ನು ಸ್ಮರಿಸಿದ ಅವರ ಅಸ್ಪೃಶ್ಯತೆ ಮತ್ತು ಬಡತನದ ನಡುವೆಯೂ ಶಿಕ್ಷಣದ ಮೂಲಕ ಉನ್ನತ ಸ್ಥಾನಕ್ಕೇರಿದ ಅವರ ಸಾಧನೆ ಇಂದಿನ ಪೀಳಿಗೆಗೆ ಮಾದರಿ. ನಮ್ಮ ಭವಿಷ್ಯ ಹಣೆಬರಹದಲ್ಲಿಲ್ಲ ಅದು ನಮ್ಮ ಕೈಗಳಲ್ಲಿದೆ. ಶಿಕ್ಷಣ ಸಿಗದಿದ್ದರೆ ಸಮಾಜದ ಏಳಿಗೆ ಅಸಾಧ್ಯ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಎಂತಹ ಗುರಿಯನ್ನೂ ತಲುಪಬಹುದು ಎಂದು ಹೇಳಿದರು.
ಇದಕ್ಕೂ ಮುನ್ನ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಟೌನ್ ಹಾಲ್ ಬಳಿಯ ಬಾಬೂಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ನಗರ ಪೆÇಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ.,ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಡ್ಡೂರು ಶ್ರೀನಿವಾಸಲು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಉಪವಿಭಾಗ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ದೊಡ್ಡಮನಿ, ಗೌರವಾಧ್ಯಕ್ಷರಾದ ಶ್ಯಾಮ್ ನಾಟಿಕರ್ ಸೇರಿದಂತೆ ಸಮಾಜದ ಮುಖಂಡರು ಮಹೇಶ್ ಹುಬ್ಬಳ್ಳಿ, ಲಿಂಗರಾಜ್, ರಾಜು ವಾಡೆಕರ್, ಇತರರು ಹಾಜರಿದ್ದರು.




















