ಕಲಬುರಗಿ :ಅ.1: ದುವ್ರ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ‘ಮಹಾಂತ ಜೋಳಿಗೆ’ ಖಾತಿಯ ಇಳಕಲ್ ಪೂಜ್ಯ ಡಾ.ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ, ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ-ವ್ಯಸನಮುಕ್ತ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು. ಡಾ.ಮಹಾಂತ ಶ್ರೀಗಳು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ, ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸಮಾಜಕ್ಕೆ ಮಾಸರಿಯಾಗಿದ್ದಾರೆ ಎಂದರು. ಇಂದಿನ ಯುವಕರು ಧೂಮಪಾನ, ಮದ್ಯಪಾನ, ಗುಟ್ಕಾ, ತಂಬಾಕು ಸೇವನೆ, ಮಾದಕ ವಸ್ತುಗಳ ಸೇವನೆಗೆ ಒಳಗಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇದರಿಂದ ದೇಶದಲ್ಲಿಂದು ಅನೇಕ ಕುಟುಂಬಗಳು ಬೀದಿಪಾಲಾಗುತ್ತಿದ್ದು, ಕೆಟ್ಟ ವ್ಯಸನಗಳಿಂದ ಹೊರಬಂದು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ, ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.























