Home ಜಿಲ್ಲೆ ಮಾ.31 ರಂದು ಡಾ. ನಾಗಲಕ್ಷ್ಮಿ ಚೌಧರಿ ಅಥಣಿಗೆ : ಮಹಿಳಾ ದಿನಾಚರಣೆ ಉಡಿ ತುಂಬುವ ಕಾರ್ಯಕ್ರಮ

ಮಾ.31 ರಂದು ಡಾ. ನಾಗಲಕ್ಷ್ಮಿ ಚೌಧರಿ ಅಥಣಿಗೆ : ಮಹಿಳಾ ದಿನಾಚರಣೆ ಉಡಿ ತುಂಬುವ ಕಾರ್ಯಕ್ರಮ

ಅಥಣಿ : ಮಾ.27:ಮಹಿಳಾ ಸಬಲೀಕರಣವು ಸಮಗ್ರ ಸಮಾಜದ ಪ್ರಗತಿಯ ಮೂಲಾಧಾರವಾಗಿದ್ದು, ಮಹಿಳೆಯರು ತಮ್ಮಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ಸ್ವಾವಲಂಬನೆಯನ್ನು ಬಲಪಡಿಸುವುದು ಅತ್ಯಂತ ಅಗತ್ಯವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಪಡೆದು ಮಹಿಳೆಯರು ಮುನ್ನಡೆಯಬೇಕು ಎಂದು ಭರವಸೆ ಬೆಳಕು ಫೌಂಡೇಶನ್ ಅಧ್ಯಕ್ಷೆ ರೂಪಾ ಕಾಂಬಳೆ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮಹಿಳಾ ದಿನಾಚರಣೆ ಅಂಗವಾಗಿ ನಮ್ಮ ಭರವಸೆ ಬೆಳಕು ಫೌಂಡೇಶನ್ ದ್ವಿತೀಯ ವರ್ಷದ ವಾರ್ಷಿಕೋತ್ಸವ. ವಿಶ್ವ ಮಹಿಳಾ ದಿನಾಚರಣೆ ಹಾಗೂ ಮುತ್ತೈದೆಯರಿಗೆ ಉಡಿ ತುಂಬುವ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಇದೇ ಮಾರ್ಚ್ 31ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಗಚ್ಚಿನ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಲಕ್ಷ್ಮಣ ಸವದಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೆ ಪುರಸಭೆ ಅಧ್ಯಕ್ಷರು. ಉಪಾಧ್ಯಕ್ಷರು ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ತಾಲೂಕಿನ ಹಾಗೂ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ತಮ್ಮಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಡಾ. ನಾಗಲಕ್ಷ್ಮಿ ಚೌಧರಿ ಅವರಿಂದ ಪರಿಹಾರ ಕಂಡು ಕೊಳ್ಳಬೇಕು ಎಂದು ಮನವಿ ಮಾಡಿದರು.

ಆನಂತರ ಕರುನಾಡು ಕಾರ್ಮಿಕ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ರಾಣಿ ಬಡಿಗೇರ ಮಾತನಾಡಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮೊದಲ ಬಾರಿಗೆ ಅಥಣಿಗೆ ಆಗಮಿಸುತ್ತಿದ್ದಾರೆ. ಮಹಿಳೆಯರು ಬೆಂಗಳೂರಿಗೆ ಹೋಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದು ಕಷ್ಟಸಾಧ್ಯ. ಹೀಗಾಗಿ ಅಥಣಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿ, ತಮ್ಮ ಕುಂದು ಕೊರತೆಗಳನ್ನು ನೇರವಾಗಿ ಅವರ ಗಮನಕ್ಕೆ ತಂದು ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಇದೊಂದು ಉತ್ತಮ ಅವಕಾಶ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಡಾ. ಭಾರತಿ ವಿಜಾಪುರೆ. ರಾಣಿ ಬಡಿಗೇರ. ಕಾದಂಬರಿ ಅಕ್ಕೋಳ. ಸವಿತಾ ಕಾಂಬಳೆ, ಗೀತಾ ಮಡ್ಡಿ, ವೈಶಾಲಿ ಮೇಲ್ಗಡೆ, ಹಣಮಂತ ಕುರಬರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.