Home ಜಿಲ್ಲೆ ಬೆಂಗಳೂರು ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಡಾ. ಶರೀಫ್ ಅಧಿಕಾರ ಸ್ವೀಕಾರ

ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಡಾ. ಶರೀಫ್ ಅಧಿಕಾರ ಸ್ವೀಕಾರ

ಕೋಲಾರ: ೩-ಮುದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ. ಆರ್. ಮೊಹಮ್ಮದ್ ಶರೀಫ್ ಅವರು ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಅಧಿಕಾರ ಸ್ವೀಕರಿಸಿದರು.


ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರಿಗೆ ಗುಣಮಟ್ಟದ, ಸಮಯೋಚಿತ ಹಾಗೂ ಜನಸ್ನೇಹಿ ಆರೋಗ್ಯ ಸೇವೆ ಒದಗಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ. ಜಿಲ್ಲಾ ಆಸ್ಪತ್ರೆಯ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ವೈದ್ಯರು, ಶುಶ್ರೂಷಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದರು.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಆದ್ಯತೆ ನೀಡಲಾಗುವುದು ಎಂದರು. ಜಿಲ್ಲೆಯ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ. ಜಗದೀಶ್, ಹಿರಿಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಡಾ. ಶ್ರೀನಾಥ್ ರೆಡ್ಡಿ, ಡಾ. ಪ್ರದೀಪ್, ಡಾ. ಪುಷ್ಪಲತಾ, ಡಾ. ಕಮಲಾಕರ್, ಡಾ. ಅಶೋಕ್ ರೆಡ್ಡಿ, ಆರ್‌ಎಂಒ ಡಾ. ಕಮಲಾ, ಡಾ. ಶಾಂತಾ, ಡಾ. ನಾಗವೇಣಿ, ಡಾ. ದೀಪಾ, ಡಾ. ಶ್ರೀನಾಥ್ ಸೇರಿದಂತೆ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿ ನೂತನ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಶುಭ ಕೋರಿದರು.