
ಬೆಂಗಳೂರು, ಜು. ೧೬: ರಾಜ್ಯದಲ್ಲಿ ಪ್ರಸಕ್ತ ವರ್ಷ ನೈಋತ್ಯ ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ತಕ್ಷಣವೇ ಮಧ್ಯಪ್ರವೇಶಿಸಿ ಎನ್‌ಡಿಆರ್‌ಎಫ್ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ಹೆಚ್ಚಿನ ಆರ್ಥಿಕ ನೆರವು ನೀಡಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ತೀವ್ರ ಮಳೆ ಕೊರತೆ, ಕೃಷಿ ಬಿಕ್ಕಟ್ಟು ಹಾಗೂ ಕುಡಿಯುವ ನೀರಿನ ಆತಂಕದ ಕುರಿತು ಜುಲೈ ೧೫ರಂದು ಪ್ರಧಾನಿಗಳಿಗೆ ಸುದೀರ್ಘ ಪತ್ರ ಬರೆದಿರುವ ಡಿಸಿಎಂ, ತುರ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಗ್ರಾಮೀಣ ಆರ್ಥಿಕತೆ ಮತ್ತು ಕೃಷಿ ವಲಯ ಮಳೆಯಿಲ್ಲದೆ ತತ್ತರಿಸುತ್ತಿದ್ದು, ಅಂಕಿ-ಅಂಶಗಳು ಪರಿಸ್ಥಿತಿಯ ಗಂಭೀರತೆಯನ್ನು ಬಿಂಬಿಸುತ್ತಿವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.ರಾಜ್ಯಾದ್ಯಂತ ಜೂನ್ ಮಳೆ ಕೊರತೆ: ಶೇಕಡಾ ೪೨,ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊರತೆ: ಶೇಕಡಾ ೩೬,ಜುಲೈ ತಿಂಗಳ ಒಟ್ಟಾರೆ ಕೊರತೆ: ಶೇಕಡಾ ೩೪.
ರಾಜಧಾನಿ ಬೆಂಗಳೂರಿನಲ್ಲಿ ಕೊರತೆ: ಶೇಕಡಾ ೩೪ಕುಡಿಯುವ ನೀರಿಗೆ ಆಹಾಕಾರ, ಅಂತರ್ಜಲ ಕುಸಿತವಾಗಿದ್ದುರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು, ಗ್ರಾಮೀಣ ಭಾಗ ಮಾತ್ರವಲ್ಲದೆ ರಾಜಧಾನಿ ಬೆಂಗಳೂರಿನಲ್ಲೂ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿದ್ದು, ರೈತರ ಜೀವನೋಪಾಯಕ್ಕೆ ಧಕ್ಕೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಇರುವ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ) ಮಾನದಂಡಗಳ ಪ್ರಕಾರ ಬರ ಘೋಷಣೆ ಮಾಡುವುದು ಸವಾಲಿನ ಕೆಲಸವಾಗಿದೆ. ಹಾಗಾಗಿ ಪ್ರಸಕ್ತ ಪರಿಸ್ಥಿತಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ನಿಯಮಗಳನ್ನು ಸಡಿಲಗೊಳಿಸಬೇಕು ಮತ್ತು ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಾ. ಜಿ. ಪರಮೇಶ್ವರ್ ಅವರು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.
































