
ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಹವಾಲಾ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಇತರರಿಗೆ ಸೇರಿದ ₹23.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಪ್ರಕರಣದಲ್ಲಿ ಗುಲ್ಷನ್ ಖಟ್ಟರ್ ಮತ್ತು ನೇಹಾ ಟಂಡನ್ ಅವರಿಗೆ ಸೇರಿದ ಆಸ್ತಿಗಳನ್ನೂ ಜಪ್ತಿ ಮಾಡಲಾಗಿದೆ. ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ₹13.76 ಕೋಟಿ ಮೌಲ್ಯದ ಚರಾಸ್ತಿ ಹಾಗೂ ₹9.58 ಕೋಟಿ ಮೌಲ್ಯದ ಸ್ಥಿರಾಸ್ತಿ ಸೇರಿವೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಡಿ ಜಪ್ತಿ ಮಾಡಿರುವ ಒಟ್ಟು ಆಸ್ತಿಯ ಮೌಲ್ಯ ₹343 ಕೋಟಿ ತಲುಪಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
₹2,300 ಕೋಟಿ ವರ್ಗಾವಣೆ:
ಕಿಂಗ್ 567 ಸೇರಿದಂತೆ ವಿವಿಧ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಆಟಗಾರರಿಂದ ಹಣ ಸಂಗ್ರಹಿಸಿ ವಂಚಿಸಿರುವುದು, ಹವಾಲಾ ಜಾಲ ಹಾಗೂ ವಿದೇಶಿ ಹಣ ವರ್ಗಾವಣೆ ಮಾರ್ಗಗಳನ್ನು ಬಳಸಿರುವುದು ಮತ್ತು ನಕಲಿ ಕಂಪನಿಗಳು ಹಾಗೂ ಮ್ಯೂಲ್ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಇ.ಡಿ. ತನಿಖೆ ನಡೆಸುತ್ತಿದೆ.
ಈ ಹಿಂದೆ ದೇಶದ ವಿವಿಧ ರಾಜ್ಯಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ₹2,300 ಕೋಟಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ನಡೆದಿರುವ ಶಂಕೆಯನ್ನು ಇ.ಡಿ. ವ್ಯಕ್ತಪಡಿಸಿತ್ತು. ದಾಳಿಗಳ ಸಂದರ್ಭದಲ್ಲಿ ನಗದು, ಚಿನ್ನಾಭರಣ, ಐಷಾರಾಮಿ ವಾಹನಗಳು ಹಾಗೂ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಜಾಮೀನಿನ ಮೇಲೆ ಬಿಡುಗಡೆ:
ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು 2025ರ ಆಗಸ್ಟ್ 23ರಂದು ಸಿಕ್ಕಿಂನ ಗ್ಯಾಂಗ್‌ಟಾಕ್‌ನಲ್ಲಿ ಬಂಧಿಸಿದ್ದರು. ಸುಮಾರು ನಾಲ್ಕು ತಿಂಗಳ ನ್ಯಾಯಾಂಗ ಬಂಧನದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ನ್ಯಾಯಾಲಯದ ಜಾಮೀನು ಆದೇಶದ ಹಿನ್ನೆಲೆಯಲ್ಲಿ 2025ರ ಡಿಸೆಂಬರ್ 30ರಂದು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.
ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಇಡಿಅಧಿಕಾರಿಗಳು ಮತ್ತಷ್ಟು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆ ಮುಂದುವರಿದಿದೆ.






















