
ಯಾದಗಿರಿ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಡೆಸಿರುವ ದಾಳಿಯನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ರಂಗನಗೌಡ ಪಾಟೀಲ್ ದೇವಿಕೇರಿ ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಇಲಾಖೆಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜನರ ವಿಶ್ವಾಸ ಗಳಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಸಚಿವರ ರಾಜಕೀಯ ಬೆಳವಣಿಗೆಯನ್ನು ಸಹಿಸದ ಬಿಜೆಪಿ ರಾಜಕೀಯ ದ್ವೇಷದಿಂದ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಂಗನಗೌಡ ಪಾಟೀಲ್ ಆರೋಪಿಸಿದರು.
ಇಡಿ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸಿಕೊಳ್ಳುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ. ತನಿಖಾ ಸಂಸ್ಥೆಗಳು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅವುಗಳನ್ನು ರಾಜಕೀಯ ಒತ್ತಡದ ಸಾಧನವಾಗಿ ಬಳಸುವುದು ಸರಿಯಲ್ಲ ಎಂದರು.
ಸಚಿವ ಸತೀಶ್ ಜಾರಕಿಹೊಳಿ ಅವರ ಜನಪರ ಕಾರ್ಯಗಳು ಹಾಗೂ ರಾಜಕೀಯವಾಗಿ ಬೆಳೆಯುತ್ತಿರುವ ಜನಪ್ರಿಯತೆಯನ್ನು ತಡೆಯಲು ಇಂತಹ ದಾಳಿಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದ್ದರೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜ್ಯದ ಜನತೆ ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
ತನಿಖೆ ಕಾನೂನು ಪ್ರಕಾರ ನಡೆಯಲಿ. ಆದರೆ ತನಿಖಾ ಸಂಸ್ಥೆಗಳ ದುರುಪಯೋಗಕ್ಕೆ ಅವಕಾಶ ನೀಡಬಾರದು. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಿಗೆ ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಶಕ್ತಿ ಸದಾ ಇರಲಿದೆ ಎಂದು ರಂಗನಗೌಡ ಪಾಟೀಲ್ ದೇವಿಕೇರಿ ತಿಳಿಸಿದ್ದಾರೆ.




















