Home Uncategorized ಮುರುಸು ಚಂಡಮಾರುತದ ಎಫೆಕ್ಟ್: ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ, ಬೆಂಗಳೂರಿಗೆ ಯೆಲ್ಲೋ ಅಲರ್ಟ್

ಮುರುಸು ಚಂಡಮಾರುತದ ಎಫೆಕ್ಟ್: ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ, ಬೆಂಗಳೂರಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ನ.೨: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮುರುಸು ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀರುವ ಸಾಧ್ಯತೆಯಿದ್ದು, ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.


ಆಂಧ್ರಪ್ರದೇಶದ ಕರಾವಳಿಗೆ ಇಂದು ಬೆಳಿಗ್ಗೆ ಮುರುಸು ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ ಸುಮಾರು ೧೧೦ ಕಿಲೋಮೀಟರ್ ವೇಗದಲ್ಲಿ ಚಂಡಮಾರುತ ಚಲಿಸುತ್ತಿದೆ. ಇದರ ಪರಿಣಾಮ ಆಂಧ್ರಪ್ರದೇಶ ಮಾತ್ರವಲ್ಲದೆ ತಮಿಳುನಾಡು, ಒಡಿಶಾ, ಛತ್ತೀಸ್‌ಗಢ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.


ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್:
ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲೂ ಮುರುಸು ಚಂಡಮಾರುತದ ಪರಿಣಾಮ ಬೀರುವ ಸಾಧ್ಯತೆಯಿದೆ. ಇಂದು ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಳೆಯಿಂದ ಸತತ ಮೂರು ದಿನ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.


ಬೆಂಗಳೂರಿನಲ್ಲಿ ಗಂಟೆಗೆ ೩೦ರಿಂದ ೪೦ ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಚಂಡಮಾರುತದ ಚಲನೆ ಮತ್ತು ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ನವೆಂಬರ್ ೫ರವರೆಗೆ ಮಳೆ ಎಚ್ಚರಿಕೆ:
ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ ೫ರವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.


ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ವೇಳೆ ಗಂಟೆಗೆ ೩೦ರಿಂದ ೪೦ ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.


ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.


ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.