Home ಜಿಲ್ಲೆ ಬೆಳೆ ಹಾನಿಗೆ ಪರಿಹಾರ ಒದಗಿಸಲು ಪ್ರಯತ್ನ

ಬೆಳೆ ಹಾನಿಗೆ ಪರಿಹಾರ ಒದಗಿಸಲು ಪ್ರಯತ್ನ

ಧಾರವಾಡ,ಆ೯: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿ ಕುರಿತು ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದೇನೆ. ಈಗಾಗಲೇ ಕಲಘಟಗಿ, ಧಾರವಾಡ, ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಲಾಗಿದೆ. ಇಂದು ಅಳ್ನಾವರ ತಾಲೂಕಿಗೆ ಭೇಟಿ ನೀಡಲಾಗಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗುವುದು. ರೈತರ ಬೆಳೆದ ಬೆಳೆಗಳ ಹಾನಿಗೆ ಸರ್ಕಾರದಿಂದ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಪುಟ ದರ್ಜೆ ಸಚಿವರಾದ ಸಂತೋಷ ಲಾಡ್ ಹೇಳಿದರು.
ಅಳ್ನಾವರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಹಾನಿಯಾಗಿವೆ. ಜಿಲ್ಲೆಯಲ್ಲಿ ರೈತರು ಬೆಳೆದ ಹೆಸರು ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೆ ಒಳಗಾಗಿದೆ. ರೈತರಿಗೆ ಸೂಕ್ತ ಪರಿಹಾರ ಒದಗಿಸಲು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ವಿತರಣೆ, ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟ, ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳಿಗೆ ಉಂಟಾದ ಹಾನಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


೨೦೨೫-೨೬ನೇ ಸಾಲಿನಲ್ಲಿ ಶೇ.೧೦೦ರಷ್ಟು ತೆರಿಗೆ ವಸೂಲಾತಿ ಸಾಧನೆ ಮಾಡಿದ ಅಳ್ನಾವರ ತಾಲ್ಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಬೆಣಚಿ ಗ್ರಾಮದ ರಮೇಶಗೌಡ ಬಾಬುಗೌಡ ಪಾಟೀಲ ಅವರ ಮನೆ ಹಾನಿಯಿಂದ ಜಾನುವಾರು ಮೃತಪಟ್ಟ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಂಜೂರಾದ ರೂ.೩೭,೫೦೦ ಪರಿಹಾರ ಧನ ಹಾಗೂ ಹೊನ್ನಾಪೂರ ಗ್ರಾಮದ ಲಗಮಣ್ಣ ನಾಯ್ಕ ಅವರ ಮನೆ ಹಾನಿಗೆ ಮಂಜೂರಾದ ರೂ.೬,೫೦೦ ಪರಿಹಾರ ಧನವನ್ನು ಸಚಿವ ಸಂತೋಷ ಲಾಡ್ ಅವರು ವಿತರಿಸಿದರು.


ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಳ್ನಾವರ ತಹಶೀಲ್ದಾರ್ ಡಿ.ಎಚ್. ಹೂಗಾರ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರ್ಕಾಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತರು ಇತರರು ಉಪಸ್ಥಿತರಿದ್ದರು.


ಸಭೆಯ ಬಳಿಕ ಅಳ್ನಾವರ ತಾಲೂಕಿನ ಬೆಣಚಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು.