
ಬೆಂಗಳೂರು, ಜು. ೨: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಭರದ ಸಿದ್ಧತೆ ನಡೆಸಿವೆ. ಸುಪ್ರೀಂ ಕೋರ್ಟ್ ಆಗಸ್ಟ್ ೩೦ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಗಡುವು ನೀಡಿರುವ ಹಿನ್ನೆಲೆಯಲ್ಲಿ ಚುನಾವಣಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.
ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ೩೬೯ ವಾರ್ಡ್‌ಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆ ಪೂರ್ಣಗೊಳಿಸಿದ್ದು, ಅಂತಿಮ ಮತದಾರರ ಪಟ್ಟಿಯನ್ನೂ ಈಗಾಗಲೇ ಪ್ರಕಟಿಸಿದೆ. ಚುನಾವಣೆಗೆ ಅಗತ್ಯವಾದ ಆಡಳಿತಾತ್ಮಕ ಹಾಗೂ ತಾಂತ್ರಿಕ ವ್ಯವಸ್ಥೆಗಳನ್ನೂ ಸಜ್ಜುಗೊಳಿಸಲಾಗಿದೆ.
ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರವೂ ಬೆಂಗಳೂರು ವ್ಯಾಪ್ತಿಯ ಪಕ್ಷದ ಶಾಸಕರು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಿದೆ. ವಾರ್ಡ್‌ವಾರು ರಾಜಕೀಯ ಪರಿಸ್ಥಿತಿ, ಮತದಾರರ ಮಾಹಿತಿ ಹಾಗೂ ಸಂಘಟನಾ ಚಟುವಟಿಕೆಗಳ ಬಗ್ಗೆ ಗಮನಹರಿಸಲು ನಿರ್ದೇಶಿಸಲಾಗಿದೆ.
ಮೂಲಗಳ ಪ್ರಕಾರ, ಇದೇ ತಿಂಗಳ ೧೮ರೊಳಗೆ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸರ್ಕಾರ ಮತ್ತು ಆಡಳಿತ ಯಂತ್ರದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ.
ನೀತಿಸಂಹಿತೆ ಜಾರಿಯಾದ ಬಳಿಕ ಹೊಸ ಟೆಂಡರ್ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿರ್ಬಂಧ ಉಂಟಾಗುವ ಸಾಧ್ಯತೆ ಇರುವುದರಿಂದ, ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅಲ್ಪಾವಧಿ (ಶಾರ್ಟ್) ಟೆಂಡರ್ ಕರೆಯುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸೂಚನೆ ನೀಡಲಾಗಿದೆ. ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಶೀಘ್ರ ಪೂರ್ಣಗೊಳಿಸಲು ಒತ್ತಡ ಹೆಚ್ಚಿಸಲಾಗಿದೆ.
ಇನ್ನೊಂದೆಡೆ, ಮುಂದಿನ ವಾರ ಜಿಬಿಎ ವ್ಯಾಪ್ತಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ರಾಜಕೀಯ ಪಕ್ಷಗಳು ಸಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ವಾರ್ಡ್‌ವಾರು ಗೆಲುವಿನ ಸಾಧ್ಯತೆಗಳ ಲೆಕ್ಕಾಚಾರ ನಡೆಸುತ್ತಿವೆ. ಟಿಕೆಟ್ ಆಕಾಂಕ್ಷಿಗಳಿಗೆ ತಮ್ಮ ಕ್ಷೇತ್ರದಲ್ಲಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾಮಾಜಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪುವಂತೆ ಸೂಚನೆ ನೀಡಲಾಗಿದೆ.
ಜಿಬಿಎ ಚುನಾವಣೆ ಘೋಷಣೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳು ಹಾಗೂ ಆಡಳಿತ ಯಂತ್ರ ಎರಡೂ ಚುನಾವಣಾ ಸಿದ್ಧತೆಯಲ್ಲಿ ಸಂಪೂರ್ಣ ತೊಡಗಿಕೊಂಡಿವೆ.



























