Home ಜಿಲ್ಲೆ ಹಿರಿಯರು ಸಮಾಜದ ಮಾರ್ಗದರ್ಶಕರು; ಗೌರವಿಸುವ ಮನೋಭಾವ ಬೆಳೆಸಿಕೊಳ್ಳಿ

ಹಿರಿಯರು ಸಮಾಜದ ಮಾರ್ಗದರ್ಶಕರು; ಗೌರವಿಸುವ ಮನೋಭಾವ ಬೆಳೆಸಿಕೊಳ್ಳಿ

ಯಾದಗಿರಿ:ಆ.೬: ಹಿರಿಯ ನಾಗರಿಕರು ಕುಟುಂಬ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಅವರನ್ನು ಗೌರವಿಸುವ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮರಿಯಪ್ಪ ಹೇಳಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೬-೨೭ನೇ ಸಾಲಿನ ಕೇಂದ್ರ ಸರ್ಕಾರದ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರಿಗೆ ಕಾನೂನುಗಳ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯ. ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡರೆ ಅವರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಶರಣಪ್ಪ ಪಾಟೀಲ್ ಮಾತನಾಡಿ, ಹಿರಿಯ ನಾಗರಿಕರಿಗೆ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ‘ಹಿರಿಯ ನಾಗರಿಕರ ಗುರುತಿನ ಚೀಟಿ’ಯ ಉಪಯೋಗಗಳ ಕುರಿತು ಮಾಹಿತಿ ನೀಡಿದರು. ಸರ್ಕಾರದ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪ್ರತಿಯೊಬ್ಬ ಅರ್ಹ ಹಿರಿಯರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಂಡೆಪ್ಪ ಆಕಾಳ ಮಾತನಾಡಿ, ಕೆಲವೊಮ್ಮೆ ಆಸ್ತಿ ವಿಚಾರ ಸೇರಿದಂತೆ ವಿವಿಧ ಕಾರಣಗಳಿಂದ ಹಿರಿಯರು ವಂಚನೆಗೆ ಒಳಗಾಗುವ ಹಾಗೂ ಮನೆಯಿಂದ ಹೊರಹಾಕಲ್ಪಡುವ ಘಟನೆಗಳು ನಡೆಯುತ್ತಿವೆ. ಆದ್ದರಿಂದ ಹಿರಿಯ ನಾಗರಿಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಭಗವಂತ ಅನಪೂರ ಮಾತನಾಡಿ, ಸಮತೋಲಿತ ಆಹಾರ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ವಯೋಸಹಜ ಕಾಯಿಲೆಗಳನ್ನು ಬಹುತೇಕ ನಿಯಂತ್ರಣದಲ್ಲಿಡಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಅಜೇತರಾವ್ ದೋಕಾ, ಡಿಡಿಆರ್‌ಸಿ ಸಿಬ್ಬಂದಿ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ವೃದ್ಧಾಶ್ರಮದ ಸಿಬ್ಬಂದಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಶ್ರೀಮತಿ ಗೀತಾ ಆಫೀಸ್ ಪಾಟೀಲ್ ಹೊಸಹಳ್ಳಿ ಪ್ರಾರ್ಥನೆ ನೆರವೇರಿಸಿದರು. ನಿವೃತ್ತ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು. ಭೀಮರಾಯ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.