
ಬೀದರ್ ಜೂ ೧೪: ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದ್ದು, ಸರ್ಕಾರದ ನಿಯಮಾನುಸಾರ ಶೇ.೬೦ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕಾರಳೆ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡದ ಬಳಕೆ ಕುರಿತು ಈಗಾಗಲೇ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೂ ಇನ್ನೂ ಕೆಲವು ಇಲಾಖೆಗಳಲ್ಲಿ ಕನ್ನಡದ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕಾತಿಯನ್ನು ಹೆಚ್ಚಿಸುವುದರ ಜೊತೆಗೆ ಕನ್ನಡದ ಅರಿವು ಮೂಡಿಸುವುದು ಅಷ್ಟೇ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯ ಸುನೀಲ ಭಾವಿಕಟ್ಟಿ ಅವರು ಗಡಿ ಭಾಗದ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಬೇಕು. ಅಗತ್ಯವಿದ್ದಲ್ಲಿ ಒಂದೇ ಶಾಲೆಗೆ ಇಬ್ಬರು ಕನ್ನಡ ಶಿಕ್ಷಕರನ್ನು ನಿಯೋಜಿಸುವ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇನ್ನೋರ್ವ ಸಮಿತಿ ಸದಸ್ಯರಾದ ಟಿ.ಎನ್. ಮಚ್ಚೆ ಅವರು ಮಾತನಾಡಿ, ವಿವಿಧ ಇಲಾಖೆಗಳ ಜೊತೆಗೆ ಆರೋಗ್ಯ ಇಲಾಖೆಯಲ್ಲಿಯೂ ಕನ್ನಡದ ಬಳಕೆ ಹೆಚ್ಚಾಗಬೇಕಿದೆ. ಆರೋಗ್ಯ ಸಿಬ್ಬಂದಿಗೆ ಕನ್ನಡದ ಅರಿವು ಮೂಡಿಸಿ, ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಸಂವಹನ ನಡೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನೋರ್ವ ಸಮಿತಿ ಸದಸ್ಯರಾದ ರಜೀಯಾ ಬಳಕಟ್ಟೆ ಅವರು ಮಾತನಾಡಿ, ಬ್ಯಾಂಕುಗಳಲ್ಲಿನ ಎಲ್ಲಾ ವ್ಯವಹಾರಗಳಲ್ಲಿ ಕನ್ನಡದ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಸಂಬAಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಸ್ವಾಗತಿಸಿ, ಸಭೆಯ ಉದ್ದೇಶ ಹಾಗೂ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಲಾಖೆ ಸಿಬ್ಬಂದಿ ಕು. ಕ್ಲೆöÊಮೆಂಟಿನಾ ಇದ್ದರು.




























