ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ನಿಗಾವಹಿಸಿ: ಸಂಗಮೇಶ ಬಬಲೇಶ್ವರ

ವಿಜಯಪುರ ಅ.10: ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬಂಧಿಸಿ ಇಲಾಖೆಗಳು ನಿಗಾವಹಿಸಬೇಕು. ಶಾಲೆ ಬಿಟ್ಟಮಕ್ಕಳ ಸಮಗ್ರ ಮಾಹಿತಿ ಕ್ರೋಡಿಕರಿಸಬೇಕು ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ ಅವರು, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಯನ್ನು ತೊಡೆದು ಹಾಕಲು ಈಗಾಗಲೇ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಅಲ್ಲಿನ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ನಿಗಾ ವಹಿಸಬೇಕು. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು 15 ದಿನಗಳೊಳಗೆ ಈ ಮಾಹಿತಿಯನ್ನು ಕ್ರೋಡಿಕರಿಸಿ ವರದಿ ನೀಡಲು ಸೂಚಿಸಲಾಯಿತು.
ನಗರದಲ್ಲಿರುವ ಸಾರ್ವಜನಿಕ ಉದ್ಯಾನವನಗಳನ್ನು ಮಕ್ಕಳು ಸೇರಿದಂತೆ ನಾಗರಿಕರ ಹಿತದೃಷ್ಟಿಯಿಂದ ಬಳಕೆಯಾಗುತ್ತಿರುವ ಕುರಿತು ಖುದ್ದಾಗಿ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಮಕ್ಕಳಿಗಾಗಿ ಒದಗಿಸಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಗರದಲ್ಲಿರುವ ಅಂಗನವಾಡಿ ಕೇಂದ್ರಗಳ ಖಾಸಗಿ ಕಟ್ಟಡಗಳಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಶೀಲಿಸಿ, ಅಂಗನವಾಡಿ ಕಟ್ಟಡಗಳು ಸುಸ್ಥಿತಿಯಲಿರುವಂತೆ ನೋಡಿಕೊಳ್ಳುವಂತೆಯೂ, ಅಂಗನವಾಡಿ ಕೇಂದ್ರಗಳ ಸುತ್ತಲೂ ಸ್ವಚ್ಛತೆಗೆ ಒತ್ತು ನೀಡಬೇಕು. ಒಂದನೇ ಹಾಗೂ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಜಿಲ್ಲೆಯಲ್ಲಿನ ಬಾಲ ಮಂದಿರಗಳ ಕಾರ್ಯನಿರ್ವಹಣೆ ಉತ್ತಮವಾಗಿದ್ದು, ಮತ್ತಷ್ಟು ಅಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಲು ಕ್ರಮವಹಿಸಬೇಕು.ಅಪೌಷ್ಟಿಕತೆಯಿಂದ ಮಕ್ಕಳು ಬಳಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಸಿಬೇಕು. ಆಯಾ ತಾಲೂಕಿನ ಆರೋಗ್ಯಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅದಕ್ಕೆ ಕಾರಣ ಗುರುತಿಸಿ, ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮವಹಿಸಬೇಕು. ಇಟ್ಟಂಗಿ ಬಟ್ಟಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಾಲ ಕಾರ್ಮಿಕರು ಇರದಂತೆ ನಿಗಾವಹಿಸಬೇಕು. ಸಂಬಂಧಿಸಿದ ಇಲಾಖೆಗಳು ಜಂಟಿಯಾಗಿ ಆಗಾಗ ದಾಳಿ ನಡೆಸಿ, ಅಂತಹ ಮಕ್ಕಳನ್ನು ರಕ್ಷಣೆ ಮಾಡಿ, ಮಾಲೀಕರ ಮೇಲೆ ಸೂಕ್ತ ಕ್ರಮ ವಹಿಸಬೇಕು. ರಕ್ಷಣೆ ಮಾಡಿದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕು ಹಾಗೂ ಅವರು ಶಿಕ್ಷಣದಿಂದ ವಂಚಿತರಾಗದಂತೆ ಶಾಲೆಗೆ ಹೋಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲ ಕಾರ್ಮಿಕದಂತಹ ಸಾಮಾಜಿ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳು ಸಮನ್ವಯತೆಯಿಂದ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಏರ್ಪಡಿಸಿ, ಬಾಲ್ಯ ವಿವಾಹ ತಡೆಗೆ ವಹಿಸಿದ ಕ್ರಮಗಳ ಬಗ್ಗೆ ವರದಿ ನೀಡಬೇಕು. ಬಾಲ್ಯ ವಿವಾಹ ತಡೆ ಕಾಯ್ದೆ ಬಗ್ಗೆ ಸ್ವಚ್ಛ ವಾಹಿನಿ ಜಿಂಗಲ್ಸ್ ಮೂಲಕ ಜಾಗೃತಿ ಮೂಡಿಸಬೇಕು. ಯಾವುದೇ ಸಮಸ್ಯೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಾರ್ವಜನಿಕರು ಸಂಪರ್ಕಿಸಬಹುದಾಗಿದ್ದು, ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳಿಗೆ ಉತ್ತಮ ಪಡಿಸುವುದರಿಂದ ಸುಭದ್ರ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.ಎಲ್ಲಾ ವಸತಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ವಸತಿ ನಿಲಯಗಳ ಆವರಣದಲ್ಲಿ ಅಪಾಯಕಾರಿ ವಿದ್ಯುತ್ ತಂತಿ ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಹೇಳಿದರು.
ಈ ಸಭೆಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ವಿ ಕುಂಬಾರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ ಮುದ್ದೇಬಿಹಾಳಮ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.