Home ಜಿಲ್ಲೆ ಕಲಬುರಗಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಬಾನುಪ್ರತಾಪ ಸಿಂಗ್ ಕರೆ

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಬಾನುಪ್ರತಾಪ ಸಿಂಗ್ ಕರೆ

ಆಳಂದ: ಜೂ.೭:ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವಾಗಿದ್ದು, ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪ್ರಕೃತಿಯ ಸಮತೋಲನವನ್ನು ಕಾಪಾಡಬೇಕು ಎಂದು ಪ್ರಾದೇಶಿಕ ಉಪವಲಯ ಅರಣ್ಯ ಅಧಿಕಾರಿ ಬಾನುಪ್ರತಾಪ ಸಿಂಗ್ ಕರೆ ನೀಡಿದರು.
ತಾಲೂಕಿನ ಕಡಗಂಚಿಯ ಮೌಂಟ್ ಕಾರ್ಮೆಲ್ ಸಿಬಿಎಸ್‌ಇ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ಮತ್ತು ಪರಿಸರ ರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಪ್ರಕೃತಿ ಮತ್ತು ಮಾನವ ಜೀವನ ಪರಸ್ಪರ ಅವಲಂಬಿತವಾಗಿದ್ದು, ಪರಿಸರ ಸಮತೋಲನ ಕಾಪಾಡುವುದು ಇಂದಿನ ಅಗತ್ಯವಾಗಿದೆ. ಹವಾಮಾನ ಬದಲಾವಣೆ, ಅರಣ್ಯ ನಾಶ ಹಾಗೂ ಮಾಲಿನ್ಯದಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಸಂಕಲ್ಪ ಮಾಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರು ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಫಾ. ವಿಲಿಯಂ ಮಿರಾಂಡಾ, ಪರಿಸರ ಸಂರಕ್ಷಣೆ ಇಂದಿನ ಅತ್ಯಂತ ತುರ್ತು ಅಗತ್ಯವಾಗಿದ್ದು, ಪ್ರಕೃತಿಯನ್ನು ಉಳಿಸುವ ಕಾರ್ಯದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದರು. ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ಮರ ನೆಡುವ ಅಭಿಯಾನವೇ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಕಾಳಜಿ ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಹಸಿರು ಮತ್ತು ಸ್ವಚ್ಛ ಭಾರತ ನಿರ್ಮಾಣ ಸಾಧ್ಯವಾಗಲಿದೆ. ಪಾಲಕರು ಮಕ್ಕಳಿಗೆ ಪರಿಸರ ಸ್ನೇಹಿ ಜೀವನಶೈಲಿಯನ್ನು ರೂಢಿಸಿಕೊಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿ, ಹಸಿರು ಮತ್ತು ಸ್ವಚ್ಛ ಪರಿಸರ ನಿರ್ಮಾಣಕ್ಕೆ ತಮ್ಮಿಂದಾದ ಕೊಡುಗೆ ನೀಡುವುದಾಗಿ ಸಂಕಲ್ಪ ಮಾಡಿದರು. ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ವಿಶೇಷ ಮೆರುಗು ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಭೂತಾಳಿ, ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.