
ಹೊಳೆ ಆಲೂರ,ಜೂ.೧೧: ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬ ನಾಗರಿಕನು ತಮ್ಮ ಮನೆಯ ಸುತ್ತಮುತ್ತ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ರೋಣ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಹೇಳಿದರು..
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೋಣ ತಾಲೂಕಿನ ಕೌಶ್ಯಲ್ಯಾ ಉಧ್ಯಶೀಲತೆ ಜೀವನೋಪಾಯ ಸಂಜೀವಿನಿ ಮಹಿಳಾ ಸಂಘ, ಹೊಳೆ ಆಲೂರ ಗ್ರಾಮ ಪಂಚಾಯತಿ ಹಾಗೂ ಕಲ್ಮೇಶ್ವರ ಪ್ರೌಡ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ, ಅರಣ್ಯ ನಾಶ, ಜಲಮೂಲಗಳ ಕ್ಷೀಣತೆ ಹಾಗೂ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದನ್ನು ತಡೆಗಟ್ಟಲು ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮುಂದಿನ ಪೀಳಿಗೆಯನ್ನು ಪರಿಸರ ಸಂರಕ್ಷಣೆಯತ್ತ ಕೊಂಡೊಯ್ಯುವುದು ಅಗತ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಸ್ವಚ್ಛತೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಹಸಿರು ಗ್ರಾಮ ನಿರ್ಮಾಣ, ಜಲ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬAಧಿಸಿದ ಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು.
ಕಾರ್ಯಕ್ರಮದಲ್ಲಿ, ಓಖಐಒ ಸಿಬ್ಬಂದಿಗಳು, ಪಿಡಿಒ, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಲ್ಲೇಶ್ವರ ಪ್ರೌಡ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
























