
ಬೆಂಗಳೂರು, ನ. ೭- ಕಗ್ಗಂಟಾಗಿರುವ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಿ ಕಬ್ಬು ಬೆಳೆಗೆ ಹೆಚ್ಚಿನ ಬೆಲೆ ನಿಗದಿ ಮಾಡುವ ರೈತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಸಂಸತ್ ಸದಸ್ಯರು ಹಾಗೂ ರೈತ ಮುಖಂಡರ ಜತೆ ಪ್ರತ್ಯೇಕ ಸಭೆ ನಡೆಸಿ ಸಮಾಲೋಚಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲಿಗೆ ಎಲ್ಲ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಹಾಗೂ ಮಾಲೀಕರೊಂದಿಗೆ ಸಭೆ ನಡೆಸಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರದ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು.
ಕಬ್ಬು ಬೆಳೆಗಾರರು ಪ್ರತಿ ಟನ್‌ಗೆ ೩೫೦೦ ರೂ. ನೀಡುವಂತೆ ಬೇಡಿಕೆಗೆ ಪಟ್ಟು ಹಿಡಿದು ಹೋರಾಟ ನಡೆಸಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಏನೆಲ್ಲಾ ಮಾರ್ಗೋಪಾಯಗಳಿವೆ. ಕಬ್ಬು ಬೆಲೆಗೆ ಹೆಚ್ಚಿನ ದರ ನಿಗದಿ ಮಾಡಲು ಸಾಧ್ಯವೇ ಎಂಬೆಲ್ಲಾ ಅಂಶಗಳ ಬಗ್ಗೆಯೂ ಮುಖ್ಯಮಂತ್ರಿಗಳು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸರಿಸುಮಾರು ೨ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಕಬ್ಬು ಬೆಳೆಗಾರರು ಕಬ್ಬು ಕಟಾವು ಮಾಡದೆ ಹೋರಾಟ ನಡೆಸಿದ್ದಾರೆ. ಹಾಗಾಗಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಗಮನಿಸಿ ಅವರ ನೆರವಿಗೆ ನಿಲ್ಲಿ ಎಂದು ಸಕ್ಕರೆ ಕಾರ್ಖಾನೆ ಮಾಲೀಕರುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸಭೆಯಲ್ಲಿ ಮನವಿ ಮಾಡಿದರು.
ರೈತರು ಸಂಕಷ್ಟದಲ್ಲಿರುವಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಬದ್ಧತೆ. ಹಾಗಾಗಿ ಹೆಚ್ಚಿನ ಬೆಲೆ ನಿಗದಿ ಮಾಡಬೇಕು ಎಂಬ ರೈತರ ಬೇಡಿಕೆ ಈಡೇರಿಕೆಗೆ ಏನು ಮಾಡಬೇಕು, ನೀವು ರೈತರಿಗೆ ಹೆಚ್ಚಿನ ಬೆಲೆ ನೀಡುವ ಸಂಬಂಧ ಒಂದು ಸಕಾರಾತ್ಮಕ ನಿರ್ಧಾರಕ್ಕೆ ಬನ್ನಿ ಎಂದು ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಹಾಗೂ ಮಾಲೀಕರಿಗೆ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಹೇಳಿದರು.
ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಹಾಗೂ ಮಾಲೀಕರು ತಮಗಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರಯ, ಆಗ ಸಕ್ಕರೆ ಕಾರ್ಖಾನೆಗಳ ಸಮಸ್ಯೆಯನ್ನು ಬಗೆಹರಿಸಲು ನಾವು ಬದ್ಧರಿದ್ದೇವೆ. ಸದ್ಯ ಕಬ್ಬು ಬೆಳೆಗಾರರಿಗೆ ಹೆಚ್ಚಿನ ಬೆಲೆ ನೀಡುವ ಸಂಬಂಧ ಒಂದು ತೀರ್ಮಾನಕ್ಕೆ ಬನ್ನಿ ಎಂದು ಮುಖ್ಯಂತ್ರಿಗಳು ಸಭೆಯಲ್ಲಿ ಹೇಳಿದರು ಎನ್ನಲಾಗಿದೆ.
ಹಿಂದಿನ ಸಭೆಯಲ್ಲಿ ರಾಜ್ಯದ ೮೦ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಪಾಲ್ಗೊಂಡಿದ್ದರು.
ರೈತರ ಜತೆಯೂ ಚರ್ಚೆ
ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಂತರ ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರ ಮುಖಂಡರ ಜತೆಯೂ ಸಭೆ ನಡೆಸಿ ರೈತರ ನೆರವಿಗೆ ಸರ್ಕಾರ ಸಿದ್ಧವಿದೆ. ಆದರೆ, ಕಬ್ಬು ಬೆಳೆಗೆ ಎಫ್‌ಆರ್‌ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಆದರೂ ರಾಜ್ಯ ಸರ್ಕಾರ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ. ಸಮಯ ನೀಡಿದರೆ ಅವರನ್ನು ನಾಳೆಯೇ ಭೇಟಿ ಮಾಡಿ ನಿಮ್ಮ ಸಮಸ್ಯೆಯನ್ನು ಅವರ ಗಮನಕ್ಕೆ ತರುತ್ತೇನೆ ಎಂದು ರೈತ ಮುಖಂಡರಿಗೆ ಅಭಯ ನೀಡಿದರು.
ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಯಾವ ರೀತಿ ನೆರವು ನೀಡಬಹುದು ಎಂಬ ಬಗ್ಗೆಯೂ ಮುಖ್ಯಮಂತ್ರಿಗಳು ಸಭೆಯಲ್ಲಿ ರೈತ ಮುಖಂಡರ ಜತೆ ಚರ್ಚೆ ನಡೆಸಿದ್ದು, ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಹೆಚ್ಚಿನ ಬೆಲೆ ನೀಡುವ ಸಂಬಂಧ ಚರ್ಚಿಸಿದ್ದೇನೆ. ಆದಷ್ಟು ಶೀಘ್ರ ಸಮಸ್ಯೆಯನ್ನು ಬಗೆಹರಿಸಲಾಗುವುದು. ಹೋರಾಟ ಕೈ ಬಿಡಿ ಎಂದು ಕಬ್ಬು ಬೆಳೆಗಾರರಿಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಮನವಿ ಮಾಡಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಹೊಣೆ. ಅದನ್ನು ಪರಿಹರಿಸುವ ಹೊಣೆಯೂ ಕೇಂದ್ರದ್ದೆ. ಈಬಗ್ಗೆ ಕೇಂದ್ರಕ್ಕೂ ಪತ್ರ ಬರೆದಿದ್ದೇನೆ. ಪ್ರಧಾನಿ ಮೋದಿ ಅವರು ಸಮಯ ನೀಡಿದರೆ ಅವರನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು ಪರಿಹಾರ ದೊರಕಿಸಿಕೊಡುತ್ತೇನೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಹೇಳಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ್, ಹೆಚ್. ಕೆ. ಪಾಟೀಲ್, ಎಂ.ಬಿ. ಪಾಟೀಲ್,ಸತೀಶ್ ಜಾರಕಿ ಹೊಳಿ, ಆರ್.ಬಿ. ತಿಮ್ಮಪುರ, ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ನೆಹರ್ ಸಿಂಗ್, ಮಾಜಿ ಸಚಿವ ಮುರಗೇಶ್ ನಿರಾಣಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರತಿಭಟನೆ ತೀವ್ರ ಸ್ವರೂಪ
ಪ್ರತಿ ಟನ್ ಕಬ್ಬಿಗೆ ೩೫೦೦ ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ, ಬೆಳಗಾವಿ, ಬಾಗಲಕೋಟೆ, ವಿಜಪುರ ,ಗದಗ ಜಿಲ್ಲೆಗಳಲ್ಲಿ ಹೋರಾಟ ದಿನೇ ದಿನೇ ತೀವ್ರ ಸ್ವರೂಪ ಪಡೆದಿದ್ದು, ಬೆಳಗಾವಿಯ ಹತ್ತರಿಗಿಯಲ್ಲಿ ನೂರಾರು ಮಂದಿ ರೈತರು ದಿಢೀರ್ ಎಂದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಕೆಲಕಾಲ ತಡೆದು ಪ್ರತಿಭಟನೆ ನಡೆಸಿದರು.
ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಪೊಲೀಸರ ಮನವಿ ಮೇರೆಗೆ ಹೆದ್ದಾರಿ ಬಂದ್‌ನ್ನು ಕೈ ಬಿಟ್ಟು ಸರ್ವೀಸ್ ರಸ್ತೆಯಲ್ಲಿ ಕುಳಿತು ಹೋರಾಟ ಮುಂದುವರಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಅಲ್ಲಿ ಏನು ತೀರ್ಮಾನವಾಗುತ್ತೋ ನೋಡಿಕೊಂಡು ಮುಂದಿನ ಹೋರಾಟದ ಸ್ವರೂಪವನ್ನು ನಿರ್ಧರಿಸುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲು ಎಂದು ರೈತ ಮುಖಂಡರು ಹೇಳಿದರು.
ಬೆಳಗಾವಿಯ ಗುರ್ಲಾಪುರದಲ್ಲಿ ರೈತರು ಇಂದಿನ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಮುಂದೂಡಿದ್ದು, ಬೇಡಿಕೆ ಈಡೇರಿಕೆಗೆ ನಾಳೆ ಸಂಜೆವರೆಗೂ ಗಡುವು ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

























