
ವಿಜಯಪುರ,ಅ. ೯- ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು, ಬಡವರು, ಯುವಕರು ಹಾಗೂ ಮಹಿಳೆಯರ ಹಿತವನ್ನು ಕಡೆಗಣಿಸಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ಒಂದು ಕಡೆ ರೈತರು ಬರಗಾಲದಿಂದ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ಎಲ್ಲ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಬೆದರಿಕೆಯ ತಂತ್ರಗಳನ್ನು ಸರ್ಕಾರ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.
ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ೨೫ ವರ್ಷಗಳ ಸಾರ್ವಜನಿಕ ಜೀವನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸೆಪ್ಟೆಂಬರ್ ೧೭ರಿಂದ ಅಕ್ಟೋಬರ್ ೧೭ರವರೆಗೆ ದೇಶಾದ್ಯಂತ ಮತ್ತು ಕರ್ನಾಟಕದಲ್ಲೂ ಬಿಜೆಪಿ ವತಿಯಿಂದ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ವಿಜಯಪುರದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ೨೦೦೧ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ, ೨೦೧೪ರಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಜೀವನ ಆರಂಭಿಸಿದ ಬಳಿಕ ನಿರಂತರವಾಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ’ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ಎಂಬ ತತ್ವದಡಿ ದೇಶವನ್ನು ಮುನ್ನಡೆಸುತ್ತಿರುವ ಅವರ ಸೇವೆಯನ್ನು ಜನರಿಗೆ ತಲುಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ರೈತರಿಗೆ ಹೆಕ್ಟೇರ್‌ಗೆ ೫೦ ಸಾವಿರ ಪರಿಹಾರ ನೀಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಕ್ಕೂ ಹೆಚ್ಚು ಕಾಲ ಕಳೆದಿದ್ದರೂ, ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ನೀಡುವುದನ್ನು ಬಿಟ್ಟರೆ, ಹೊಸ ಯೋಜನೆಗಳು, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಹಾಗೂ ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ. ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎರಡೂವರೆ ಲಕ್ಷ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಸಾವಿರ ಹುದ್ದೆಗಳನ್ನೂ ಸಮರ್ಪಕವಾಗಿ ಭರ್ತಿ ಮಾಡಿಲ್ಲ. ಇದರಿಂದ ಲಕ್ಷಾಂತರ ಯುವಕರ ಭವಿಷ್ಯ ಅತಂತ್ರವಾಗಿದೆ ಎಂದು ಟೀಕಿಸಿದರು.
ಬರಗಾಲದಿಂದ ತತ್ತರಿಸಿರುವ ರೈತರ ನೆರವಿಗೆ ಧಾವಿಸಬೇಕೆಂದು ಬಿಜೆಪಿ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ’ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸಿತು. ಪ್ರತಿ ಹೆಕ್ಟೇರ್‌ಗೆ ?೫೦ ಸಾವಿರ ಪರಿಹಾರ ನೀಡಬೇಕು, ರೈತರ ಕೃಷಿ ಸಾಲವನ್ನು ?೫ ಲಕ್ಷದವರೆಗೆ ಮನ್ನಾ ಮಾಡಬೇಕು ಹಾಗೂ ಕೃಷಿ ಚಟುವಟಿಕೆಗಳಿಗೆ ಪ್ರತಿದಿನ ಎಂಟು ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದ್ದೇವೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷ ಅಧಿವೇಶನದಲ್ಲಿಯೂ ರೈತರ ಪರವಾಗಿ ಬಿಜೆಪಿ ಧ್ವನಿ ಎತ್ತಿತ್ತು. ಆದರೆ, ರೈತ ಕುಟುಂಬಕ್ಕೆ ಕೇವಲ ?೨,೫೦೦ ಪರಿಹಾರ ಘೋಷಿಸಿರುವ ಸರ್ಕಾರ ಅದನ್ನೂ ಸಮರ್ಪಕವಾಗಿ ವಿತರಿಸಿಲ್ಲ. ರೈತರ ಸಂಕಷ್ಟಕ್ಕೆ ಇಷ್ಟು ಸೀಮಿತ ಪರಿಹಾರ ನೀಡುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಬಗ್ಗೆ ಕಾಳಜಿ ಇದೆ ಎಂದು ಹೇಳುವುದರಿಂದ ಪ್ರಯೋಜನವಿಲ್ಲ. ರಿಯಲ್ ಎಸ್ಟೇಟ್ ಯೋಜನೆಗಳು ಮತ್ತು ಟೌನ್‌ಶಿಪ್‌ಗಳ ಬಗ್ಗೆ ತೋರುವ ಆಸಕ್ತಿಯನ್ನು ರೈತರ ಸಮಸ್ಯೆಗಳ ಪರಿಹಾರದಲ್ಲಿಯೂ ತೋರಿಸಬೇಕು. ರೈತರ ಸಂಕಷ್ಟವನ್ನು ನೇರವಾಗಿ ಅರಿಯುವ ಬದಲು ಹೆಲಿಕಾಪ್ಟರ್‌ನಲ್ಲಿ ಬರ ವೀಕ್ಷಣೆ ಮಾಡುವುದರಿಂದ ಅವರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ಟೀಕಿಸಿದರು.
ಮಹಾರಾಷ್ಟ್ರ ಮಾದರಿಯಲ್ಲಿ ಸಾಲ ಮನ್ನಾ ಮಾಡಿ
ನೆರೆಯ ಮಹಾರಾಷ್ಟ್ರದಲ್ಲಿ ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಬೇಕು. ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಹೈನುಗಾರಿಕೆಗೆ ಘೋಷಿಸಿದ್ದ ಪ್ರೋತ್ಸಾಹಧನದ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು. ಬರಗಾಲ ಮುಗಿಯುವವರೆಗೆ ಕನಿಷ್ಠ ಐದು ತಿಂಗಳ ಕಾಲ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ಹೆಚ್ಚುವರಿಯಾಗಿ ?೫ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.


























