
ಕೊಲ್ಹಾರ:ನ.30: ಮೆಕ್ಕೆಜೋಳ, ಹತ್ತಿ, ಈರುಳ್ಳಿ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಹಾಗೂ ಖರದಿ ಕೇಂದ್ರ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಬಸವನಬಾಗೇವಾಡಿ ಮಂಡಲದ ವತಿಯಿಂದ ಪಟ್ಟಣದ ದ್ಯಾವಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಛೇರಿಯವರೆಗೆ ಪಾದಯಾತ್ರೆಯ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಮಾತನಾಡುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತರ ಹಿತವನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು. ರೈತರು ಶ್ರಮವಹಿಸಿ ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಪರದಾಡುವಂತಾಗಿದೆ, ರೈತಾಪಿ ವರ್ಗದ ಅಳಲು ಆಲಿಸಬೇಕಾದ ಸರ್ಕಾರ ಕುಂಭಕರ್ಣ ನಿದ್ರೆಗೆ ಜಾರಿದೆ, ಮೆಕ್ಕೆಜೋಳ, ಹತ್ತಿ, ಈರುಳ್ಳಿ ಸಹಿತ ಇನ್ನಿತರ ಬೆಳೆಗಳನ್ನು ಬೆಳೆದಿರುವ ರೈತರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದ ಕಾರಣ ರೈತರ ಸ್ಥಿತಿ ಹೇಳತೀರದಾಗಿದೆ ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿ.ಎಂ ಗಣಕುಮಾರ, ಚಿನ್ನಪ್ಪ ಗಿಡ್ಡಪ್ಪಗೋಳ, ಕಲ್ಲು ಸೊನ್ನದ, ಮಾಜಿ ಪ.ಪಂ ಅಧ್ಯಕ್ಷ ವಿರುಪಾಕ್ಷಿ ಕೋಲಕಾರ, ಮಂಜುನಾಥ ತುಂಬರಮಟ್ಟಿ, ಅಖೀಲಗೌಡ ಪಾಟೀಲ, ಹಾಗೂ ಇನ್ನಿತರರು ಇದ್ದರು.

























