
ಭಾಲ್ಕಿ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಬುಧವಾರ ರೈತರು, ವಿವಿಧ ಸಂಘ ಸಂಸ್ಥೆಯ ಮುಖಂಡರು ಭಜನೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದು ರೈತರು ಆತಂಕದಲ್ಲಿದ್ದಾರೆ. ರಾಜ್ಯ ಸರಕಾರ ಜಿಲ್ಲೆಯ ನಾಲ್ಕು ತಾಲೂಕುಗಳು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಭಾಲ್ಕಿ, ಹುಲಸೂರು, ಕಮಲನಗರ ಮತ್ತು ಔರಾದ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟು ಅನ್ಯಾಯ ಎಸಗಿದೆ.
ಇದರಿಂದ ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ಆರ್ಥಿಕವಾಗಿ ಸಂಕಷ್ಟಕ್ಕಿಡಾಗಿದ್ದಾರೆ. ಕೂಡಲೇ ರಾಜ್ಯ ಸರಕಾರ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಿ ಪರಿಹಾರ ವಿತರಿಸುವುದರ ಜತೆಗೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಪ್ರಮುಖರಾದ ಜೈರಾಜ ಕೊಳ್ಳಾ, ಕೆ.ಡಿ.ಗಣೇಶ, ಸಂಗಮೇಶ ಭೂರೆ, ದೀಪಕ ಸಿಂಧೆ ಸೇರಿದಂತೆ ಹಲವರು ಇದ್ದರು.






























