
ಗುರುಮಠಕಲ್: ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಮಹಿಳಾ ಕಾರ್ಮಿಕರೊಬ್ಬರು ಕೆಲಸದ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ಮಹಿಳೆಯನ್ನು ಅನಂತಮ್ಮ (42) ಎಂದು ಗುರುತಿಸಲಾಗಿದೆ. ನರೇಗಾ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರು ಏಕಾಏಕಿ ಕುಸಿದು ಬಿದ್ದಿದ್ದು, ಬಳಿಕ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.
ಮೃತದೇಹವನ್ನು ಸದ್ಯ ಗುರುಮಠಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಮಹಿಳಾ ಕಾರ್ಮಿಕರ ಸಾವಿನ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ



















