Home ಜಿಲ್ಲೆ ಆರ್ಥಿಕವಾಗಿ ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ನೆರವು: ಕುಲಕರ್ಣಿ

ಆರ್ಥಿಕವಾಗಿ ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ನೆರವು: ಕುಲಕರ್ಣಿ

ತಾಳಿಕೋಟೆ: ಆರ್ಥಿಕವಾಗಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ರೈತರಿಂದ ದೇಣಿಗೆ ಸಂಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಹಣ ರವಾನಿಸಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟ ಪರಿಣಾಮ ರೈತರು ಬಿತ್ತನೆ ಮಾಡಿದ್ದ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ತಾಳಿಕೋಟೆ ಪಟ್ಟಣದಲ್ಲಿಯೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.
ರೈತರ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದೆ. ಆದರೆ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಖಾತೆಗೆ ಕೇವಲ 2,500 ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿರುವುದು ಸಮರ್ಪಕವಲ್ಲ. ಕೃಷಿಗಾಗಿ ಸಾಲ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕನಿಷ್ಠ ಪ್ರತಿ ಎಕರೆಗೆ 25,000 ಪರಿಹಾರ ನೀಡಬೇಕು ಎಂದು ಸಂಘವು ಒತ್ತಾಯಿಸಿತ್ತು. ಆದರೆ ಸರ್ಕಾರ ಅತ್ಯಲ್ಪ ಮೊತ್ತದ ಪರಿಹಾರ ನೀಡಲು ಮುಂದಾಗಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅರವಿಂದ ಕುಲಕರ್ಣಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಆರೋಪಿಸಿರುವ ಸಂಘ, ಸರ್ಕಾರಕ್ಕೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ರೈತರಿಂದಲೇ ಸಾಧ್ಯವಾದಷ್ಟು ದೇಣಿಗೆ ಸಂಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ರವಾನಿಸಲು ಮುಂದಾಗಿದೆ. ಇದು ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಗಮನ ಸೆಳೆಯುವ ಹಾಗೂ ರೈತರ ಸಂಕಷ್ಟವನ್ನು ಸರ್ಕಾರದ ಮುಂದಿಡುವ ಸಾಂಕೇತಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರದಿಂದ ಪ್ರಥಮ ಹಂತದಲ್ಲಿ ತಾಳಿಕೋಟೆ ಪಟ್ಟಣದಲ್ಲಿ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಿಸಲಾಗುವುದು. ನಂತರ ಬಸವನಬಾಗೇವಾಡಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ದೇಣಿಗೆ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ದೇಣಿಗೆ ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡುವ ಅಂಗವಾಗಿ ಮಂಗಳವಾರ ಬೆಳಿಗ್ಗೆ 10.30ಕ್ಕೆ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠಕ್ಕೆ ಆಗಮಿಸಬೇಕು. ಮಠದಲ್ಲಿ ಪೂಜೆ ಸಲ್ಲಿಸಿದ ಬಳಿಕ ದೇಣಿಗೆ ಸಂಗ್ರಹಣೆಗೆ ಚಾಲನೆ ನೀಡಲಾಗುವುದು. ರೈತರು ಹಾಗೂ ಸಂಘದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ ಹಾಗೂ ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಮನವಿ ಮಾಡಿದ್ದಾರೆ.