Home ಜಿಲ್ಲೆ ಕಲಬುರಗಿ ಕಣಕಿ ಬಣವಿಗೆ ಬೆಂಕಿ: ಅಪಾರ ಹಾನಿ

ಕಣಕಿ ಬಣವಿಗೆ ಬೆಂಕಿ: ಅಪಾರ ಹಾನಿ

ಚಿತ್ತಾಪುರ: ತಾಲೂಕಿನ ಸಾತನೂರ ಗ್ರಾಮದ ವ್ಯಾಪ್ತಿಯಲ್ಲಿ ಕಣಕಿ ಬಣವಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಬಣವೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ರೈತರಿಗೆ ಆರ್ಥಿಕ ನಷ್ಟ ಉಂಟಾಗಿದೆ.
ಗ್ರಾಮದ ಕೆ.ನಾಗಾಂವ್ ವ್ಯಾಪ್ತಿಯ ಸರ್ವೆ ನಂಬರ್ 314/3 ರ ಉಮೇಶ್ ರಾಜೇಂದ್ರಪ್ಪ ಕಲಾಲ್ ಎಂಬುವರ ಹೊಲದಲ್ಲಿ ಕಣಿಕೆ ಬಣವಿಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಆತಂಕಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬಣವೆ ಸುಟ್ಟು ಕರಕಲಾಗಿರುವುದರಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾನಿಯ ಅಂದಾಜು ಕೈಗೊಂಡು ಸೂಕ್ತ ಪರಿಹಾರ ಒದಗಿಸಬೇಕು ಎಂಬುದು ರೈತರ ನಿರೀಕ್ಷೆಯಾಗಿದೆ.