
ಯಾದಗಿರಿ: ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 80 ಜೀವಗಳನ್ನು ಉಳಿಸಬಹುದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಪೃಥ್ವೀಕ್ ಶಂಕರ ಹೇಳಿದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕೈದು ವರ್ಷಗಳ ಅಪಘಾತದ ಅಂಕಿ-ಅಂಶಗಳನ್ನು ಗಮನಿಸಿದರೆ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 150ರಿಂದ 170 ಅಪಘಾತಗಳು ಸಂಭವಿಸುತ್ತಿದ್ದು, 170ರಿಂದ 190 ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಹೆಲ್ಮೆಟ್ ಹಾಗೂ ಸೀಟ್‍ಬೆಲ್ಟ್ ಬಳಕೆಯನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತಗಳಲ್ಲಿ ಸಂಭವಿಸುವ ಸಾವುಗಳನ್ನು ಗಣನೀಯವಾಗಿ ತಗ್ಗಿಸಬಹುದು. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದರಿಂದ ತಲೆಗೆ ಗಂಭೀರ ಗಾಯಗಳಾಗಿ ಸಾವಿನ ಸಾಧ್ಯತೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಪೆÇಲೀಸ್ ಇಲಾಖೆ ನಿರಂತರವಾಗಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.
ರಸ್ತೆ ಸುರಕ್ಷತೆ ಕುರಿತು ಗುರುವಾರದಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಜಾಥಾ ಹಾಗೂ ವಾಕ್‍ಥಾನ್ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಪೆÇಲೀಸರ ದಂಡದ ಭಯದಿಂದ ಮಾತ್ರವಲ್ಲ, ತಮ್ಮ ಹಾಗೂ ಇತರರ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಟ್ರಿಪಲ್ ರೈಡಿಂಗ್, ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ, ಹೆಲ್ಮೆಟ್ ಧರಿಸದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಹೇಳಿದರು.
ಯಾದಗಿರಿ ಜಿಲ್ಲೆಯ ಎಂಟು ಸ್ಥಳಗಳಲ್ಲಿ ಐಟಿಎಂಎಸ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ಪತ್ತೆಯಾದರೆ ಸ್ವಯಂಚಾಲಿತವಾಗಿ ದಂಡ ವಿಧಿಸುವ ವ್ಯವಸ್ಥೆ ಜಾರಿಯಲ್ಲಿದೆ. ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದನ್ನು ತಡೆಯಲು ವಿಶೇಷ ಕಾರ್ಯಾಚರಣೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದರು.





















