Home ಜಿಲ್ಲೆ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

ಯಾದಗಿರಿ: ದೆಹಲಿ ಹಾಗೂ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಅದರ ಬೆಂಬಲಿತ ಸಂಘಟನೆಗಳು ಕಾನೂನುಬಾಹಿರ ಹೋರಾಟಗಳ ಮೂಲಕ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.
ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕ್ರೋಚ್ ಜನತಾ ಪಾರ್ಟಿಯವರು ತಾವು ಝಂಜೀಗಳು ಎಂದು ಹೇಳಿಕೊಳ್ಳುತ್ತಾ ಸಮಾಜದಲ್ಲಿ ಗೊಂದಲ ಹಾಗೂ ದೊಂಬಿ ಸೃಷ್ಟಿಸಲು ಮುಂದಾಗಿದ್ದಾರೆ. ಇಂತಹವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲವಾಗಿ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ಚುನಾವಣಾ ಆಯೋಗ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಎಸ್‌ಐಆರ್ ಮತ್ತು ಇಡಿ ಸೇರಿದಂತೆ ವಿವಿಧ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ನಿರಂತರ ಅನುಮಾನ ವ್ಯಕ್ತಪಡಿಸುವ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿವೆ ಎಂದು ಆರೋಪಿಸಿದರು.
ನವೆಂಬರ್ ೧ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಹುಲ್ ಗಾಂಧಿ ಬೃಹತ್ ಪ್ರತಿಭಟನೆ ಆಯೋಜಿಸಿರುವುದರ ಹಿಂದಿನ ಉದ್ದೇಶ ದೇಶದಲ್ಲಿ ಅರಾಜಕತೆ ಸೃಷ್ಟಿಸುವುದಾಗಿದೆ ಎಂದು ಶ್ರೀರಾಮುಲು ಟೀಕಿಸಿದರು. ಕೆಲವು ಯೂಟ್ಯೂಬರ್‌ಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅವರು, ೭೦ ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು.
೨೦೧೪ರಿಂದ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ. ಪ್ರಸ್ತುತ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಅಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ. ದೇಶದ ಜನತೆ ಬಿಜೆಪಿ ಹಾಗೂ ಎನ್‌ಡಿಎಗೆ ಸ್ಪಷ್ಟ ಬಹುಮತ ನೀಡಿ ಅಭಿವೃದ್ಧಿಗೆ ಬೆಂಬಲ ನೀಡಿದ್ದಾರೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸಲು ವಿಪಕ್ಷಗಳು ವಿಧ್ವಂಸಕ ಕೃತ್ಯಗಳಿಗೆ ಮುಂದಾಗಿವೆ ಎಂದು ಹರಿಹಾಯ್ದರು.
Áಜ್ಯದಲ್ಲಿ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ. ಕಬ್ಬು ಬೆಳೆಗಾರರ ಸಭೆ ನಡೆಸಿ ಬೆಂಬಲ ಬೆಲೆ ನೀಡಲು ಹಣವಿಲ್ಲ ಎಂದು ಹೇಳುತ್ತಿರುವುದು ರೈತರ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಮೋದಿ ವಿಶ್ವಗುರುವಾಗುವ ಅರ್ಹತೆ ಹೊಂದಿದ ನಾಯಕಪ್ರಧಾನಿ ನರೇಂದ್ರ ಮೋದಿ ಅವರು ಸಂತಸ್ವಭಾವದ ನಾಯಕರು. ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗಲು ಅಗತ್ಯವಾದ ಎಲ್ಲ ಅರ್ಹತೆಗಳನ್ನು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಎಷ್ಟೇ ಅಪಪ್ರಚಾರ ಮಾಡಿದರೂ ದೇಶದ ಜನರು ಅದನ್ನು ನಂಬುವುದಿಲ್ಲ ಎಂದು ಬಿ. ಶ್ರೀರಾಮುಲು ಹೇಳಿದರು.
ಖರ್ಗೆ ಕುಟುಂಬದಿAದಲೇ ಕಾಂಗ್ರೆಸ್‌ಗೆ ಅಂತಿಮ ಹೊಡೆತಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಹೇಳಿಕೆಗಳು ವಿಚಿತ್ರವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರು ಗೃಹ ಸಚಿವರಾದ ಬಳಿಕ ಲಾಂಗ್, ಮಚ್ಚುಗಳ ಬೇಡಿಕೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ಬಿಜೆಪಿಯೇ ಶ್ರಮಿಸಬೇಕಿಲ್ಲ. ದೊಡ್ಡ ಖರ್ಗೆ ಹಾಗೂ ಮರಿ ಖರ್ಗೆ ಅವರಿಂದಲೇ ಕಾಂಗ್ರೆಸ್‌ಗೆ ಕೊನೆ ಮೊಳೆ ಬೀಳಲಿದೆ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ್, ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ನಾಯ್ಕಲ್, ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ದೇವೀಂದ್ರನಾಥ ನಾದ್, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀಪುತ್ರ ಮಾಲಿಪಾಟೀಲ್, ಶ್ರೀಧರ ಸಾಹುಕಾರ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಚೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.