Home ಜಿಲ್ಲೆ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ

ಹುಬ್ಬಳ್ಳಿ,ಫೆ9: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.

ಶಿರಗುಪ್ಪಿ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ, ಭೂಮಿ ಪೂಜೆ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು. 2005 ರಲ್ಲಿ ಮನರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಅವರು ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಕಾರ್ಮಿಕ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್.ಜಕ್ಕಪ್ಪನವರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ್ ಸನದಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ಪಾಟೀಲ, ಮಾಜಿ ಸಂಸದರಾದ ಪೆÇ್ರ.ಐ.ಜಿ.ಸನದಿ, ಮಾಜಿ ಸಚಿವರಾದ ಎ.ಎಂ.ಹಿಂಡಸಗೇರಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.