
ಬೆಂಗಳೂರು,ಮಾ.೨೩-ವೇಗವಾಗಿ ಬಂದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ದುರ್ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಕೇರಳ ಮೂಲದ ಮಹಮ್ಮದ್ ಪರಾನ್ (೨೨), ರಫೀಜ್ (೪೫) ಬೆಂಗಳೂರಿನ ಮೂಲದ ರಶೀದ್(೪೫), ಸಕೀರ್ (೨೭) ಮೃತಪಟ್ಟವರು. ಗಾಯಗೊಂಡಿರುವ ಹಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೊಳಗಾದ ಬಸ್ ಕೇರಳದ ಪಿಕೆ ಟ್ರಾವೆಲ್ಸ್ ಬಸ್ ಬೆಂಗಳೂರಿಗೆ ಬರುತ್ತಿದ್ದಾಗ ನಿದ್ರೆ ಮಂಪರಿನಲ್ಲಿದ್ದ ಚಾಲಕ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಅಪಘಾತಗೊಂಡ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಅಪಘಾತದಲ್ಲಿ ಅಲೀಸ್ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಚನ್ನಪಟ್ಟಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಸ್‌ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ.































