
ಬೆಂಗಳೂರು,ಜು.೧೫: ಚಿಕ್ಕಮಗಳೂರು ನಗರದ ಬಡ ಕೂಲಿ ಕಾರ್ಮಿಕರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಬೃಹತ್ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಆಶೋಕ್ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ನೇತೃತ್ವದ ಬಿಜೆಪಿ ನಿಯೋಗ
ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು ನಗರದ ಶಂಕರಪುರ ಬಡಾವಣೆಯ ನಿವಾಸಿಗಳಾದ ಬಡ ಕೂಲಿ ಕಾರ್ಮಿಕರಿಗೆ ಸರ್ಕಾರದ ವಿವಿಧ ಉಚಿತ ಸೌಲಭ್ಯಗಳನ್ನು ಕೊಡಿಸುವುದಾಗಿ ನಂಬಿಸಿ ಕೆಲವು ವಂಚಕರು ಅವರಿಂದ ಪ್ರಮುಖ ದಾಖಲೆಗಳನ್ನು ಪಡೆದುಕೊಂಡಿದ್ದರು. ಆ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ವಿವಿಧ ಬ್ಯಾಂಕ್‌ಗಳಲ್ಲಿ ಕಾರ್ಮಿಕರ ಹೆಸರಿನಲ್ಲೇ ನಕಲಿ ಖಾತೆಗಳನ್ನು ತೆರೆಯಲಾಗಿದೆ ಎಂದು ಸಿ.ಟಿ. ರವಿ ಪತ್ರದಲ್ಲಿ ವಿವರಿಸಿದ್ದಾರೆ.
ಫಲಾನುಭವಿಗಳ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೆ, ವಂಚಕರೇ ತಮ್ಮ ಬಳಿಯಿದ್ದ ಬೇರೆ ಸಿಮ್ ಕಾರ್ಡ್‌ಗಳ ನಂಬರ್‌ಗಳನ್ನು ಲಿಂಕ್ ಮಾಡಿದ್ದಾರೆ. ಅಲ್ಲದೆ, ಖಾತೆಗೆ ಸಂಬಂಧಿಸಿದ ಪಾಸ್ ಪುಸ್ತಕ, ಚೆಕ್ ಬುಕ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ತಾವೇ ಇಟ್ಟುಕೊಂಡು, ಆ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ವಹಿವಾಟು ನಡೆಸಿ ಹಣ ಬಿಡಿಸಿಕೊಂಡಿದ್ದಾರೆ ಎಂದು ಶಾಸಕ ಸಿ.ಟಿ. ರವಿ, ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ದೂರು ದಾಖಲಾಗಿದೆ. ಆದಾಗ್ಯೂ, ಇದು ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಸೈಬರ್ ವಂಚನೆಯಾಗಿದ್ದು, ಇದರ ಹಿಂದೆ ಅಂತರರಾಜ್ಯ ಮಟ್ಟದ ದೊಡ್ಡ ಜಾಲ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ಮಟ್ಟದ ತನಿಖೆಯಿಂದ ಈ ಬೃಹತ್ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರುವುದು ಕಷ್ಟಸಾಧ್ಯ. ಬಡ ಕಾರ್ಮಿಕರಿಗೆ ನ್ಯಾಯ ಸಿಗಬೇಕಾದರೆ ಹಾಗೂ ಈ ಕಪ್ಪು ಹಣದ ದಂಧೆಯ ಮೂಲ ಜಾಲವನ್ನು ಪತ್ತೆಹಚ್ಚಲು ಪ್ರಕರಣವನ್ನು ತಕ್ಷಣವೇ ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಅವರು ಬಲವಾಗಿ ಒತ್ತಾಯಿಸಿದ್ದಾರೆ.


































