Home ಜಿಲ್ಲೆ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಸಿ: ರಾಜ್ಯ ಸರ್ಕಾರಕ್ಕೆ ಒತ್ತಾಯ

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಸಿ: ರಾಜ್ಯ ಸರ್ಕಾರಕ್ಕೆ ಒತ್ತಾಯ

ಯಾದಗಿರಿ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಗಲು-ರಾತ್ರಿ ಧರಣಿ ನಡೆಸುತ್ತಿರುವ ರಾಜ್ಯದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕರ್ನಾಟಕ ರಾಜ್ಯ ವೃತ್ತಿಪರ ಸಮಾಜಕಾರ್ಯಕರ್ತರ ಕಲ್ಯಾಣ ಸಂಘ (ಏSPSWಂ) ಸಂಪೂರ್ಣ ನೈತಿಕ ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಮೌನೇಶ ಪಾಟೀಲ್ ಬೆಳಗೇರಾ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ.
ಗರ್ಭಿಣಿಯರ ಆರೈಕೆ, ತಾಯಿ ಮತ್ತು ಶಿಶು ಆರೋಗ್ಯ, ಲಸಿಕಾ ಕಾರ್ಯಕ್ರಮಗಳ ಅನುಷ್ಠಾನ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಂತಹ ಮಹತ್ವದ ಕಾರ್ಯಗಳನ್ನು ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇಷ್ಟೊಂದು ಜವಾಬ್ದಾರಿಯುತ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ಗೌರವಧನ ಮತ್ತು ಸಾಮಾಜಿಕ ಭದ್ರತೆಗಾಗಿ ಹೋರಾಟ ನಡೆಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ?15 ಸಾವಿರ ನಿಗದಿತ ಗೌರವಧನ ನೀಡಬೇಕು. ಬಾಕಿ ಇರುವ ಗೌರವಧನ ಹಾಗೂ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ನಿವೃತ್ತಿ ಸಂದರ್ಭದಲ್ಲಿ ?5 ಲಕ್ಷ ಆರ್ಥಿಕ ನೆರವು, ಗಂಭೀರ ಅನಾರೋಗ್ಯದ ಸಂದರ್ಭದಲ್ಲಿ ಆರ್ಥಿಕ ಭದ್ರತೆ, ಮೊಬೈಲ್ ಆಪ್ ಆಧಾರಿತ ಕೆಲಸಗಳಿಗೆ ಸ್ಮಾರ್ಟ್ಫೋನ್, ಇಂಟರ್ನೆಟ್ ಹಾಗೂ ರೀಚಾರ್ಜ್ ಭತ್ಯೆ ಮತ್ತು ಮಾತೃತ್ವ ರಜೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆದಿದ್ದರೂ ಬೇಡಿಕೆಗಳ ಕುರಿತು ಸ್ಪಷ್ಟವಾದ ಲಿಖಿತ ಭರವಸೆ ಹಾಗೂ ಅಧಿಕೃತ ಆದೇಶ ಹೊರಬಂದಿಲ್ಲ. ಕೇವಲ ಮೌಖಿಕ ಭರವಸೆಗಳಿಗೆ ಸೀಮಿತವಾಗದೆ, ಸರ್ಕಾರ ಕಾಲಮಿತಿಯೊಳಗೆ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಆಶಾ ಕಾರ್ಯಕರ್ತೆಯರ ಸೇವಾ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ, ಆರೋಗ್ಯ ಇಲಾಖೆ ಮತ್ತು ಆಶಾ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಹೋರಾಟವನ್ನು ಕೇವಲ ಗೌರವಧನದ ಬೇಡಿಕೆಯಾಗಿ ಪರಿಗಣಿಸದೆ, ಮಹಿಳಾ ಕಾರ್ಮಿಕರ ಗೌರವ, ದುಡಿಮೆಯ ಮೌಲ್ಯ, ಸಾಮಾಜಿಕ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆಯ ದೃಷ್ಟಿಯಿಂದ ನೋಡಬೇಕು. ಅವರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಮ್ಮ ಸಂಘಟನೆಯು ಅಗತ್ಯ ಪ್ರಜಾಸತ್ತಾತ್ಮಕ ಕ್ರಮಗಳ ಮೂಲಕ ಸರ್ಕಾರದ ಗಮನ ಸೆಳೆಯಲಿದೆ ಎಂದು ಮೌನೇಶ ಪಾಟೀಲ್ ಬೆಳಗೇರಾ ತಿಳಿಸಿದ್ದಾರೆ.