
ಬೀದರ್:ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮೀಣ ಭಾಗಗಳ ಮೂಲಸೌಕರ್ಯ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಒಟ್ಟು 3 ಕೋಟಿ 75 ಲಕ್ಷ ವೆಚ್ಚದ ಎರಡು ಮಹತ್ವದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾ – ಚಿಟ್ಟಾ ವಾಡಿ ಚಿಟ್ಟಾ ಗ್ರಾಮ ಹಾಗೂ ಘೋಡಪಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದ ಚಿಟ್ಟಾ ಗ್ರಾಮದ ಹೊರವಲಯದಿಂದ ಘೋಡಪಳ್ಳಿ ಗ್ರಾಮದವರೆಗೆ 2 ಕೋಟಿ 25 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ಮತ್ತು ಇದೇ ಸಂದರ್ಭದಲ್ಲಿ ಚಿಟ್ಟಾ-ಚಿಟ್ಟಾ ವಾಡಿ ಗ್ರಾಮದಲ್ಲಿ 1 ಕೋಟಿ 50 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ, ಡಿವೈಡರ್ ನಿರ್ಮಾಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೂ ಚಾಲನೆ ನೀಡಿ ಮಾತನಾಡಿದರು.
ಈ ಭಾಗದ ಜನರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಹಾಗೂ ಸಾರ್ವಜನಿಕರು ದೈನಂದಿನ ಕೆಲಸಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗಲಿದೆ.
ಈ ಕಾಮಗಾರಿಯಿಂದ ರಸ್ತೆಯ ಸುಂದರೀಕರಣದ ಜೊತೆಗೆ ರಾತ್ರಿ ವೇಳೆಯಲ್ಲಿಯೂ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.
ಒಟ್ಟು 3.75 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಎರಡೂ ಕಾಮಗಾರಿಗಳು ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಸ್ಥಳೀಯ ಜನರ ಸಂಚಾರದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಮಹತ್ವದ ಯೋಜನೆಗಳಾಗಿವೆ ಎಂದು ತಿಳಿಸಿದರು.
ಕಾಮಗಾರಿಗಳ ಗುಣಮಟ್ಟಕ್ಕೆ ವಿಶೇಷ ಒತ್ತು
ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಕಾಮಗಾರಿಗಳ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿ, ನಿಗದಿತ ಯೋಜನೆಯಂತೆ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಕಾಮಗಾರಿಗಳಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು, ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು ಹಾಗೂ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಭಿವೃದ್ಧಿಯೇ ನಮ್ಮ ಆದ್ಯತೆ
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ರಸ್ತೆ ಸಂಪರ್ಕ, ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಶಿಕ್ಷಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಗ್ರಾಮೀಣ ಭಾಗದ ಜನರ ಅಗತ್ಯತೆಗಳು ಹಾಗೂ ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸುತ್ತಾ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಗ್ರಾಮವನ್ನು ಕಡೆಗಣಿಸದೆ, ಪ್ರತಿಯೊಂದು ಪ್ರದೇಶಕ್ಕೂ ಸಮಾನ ಆದ್ಯತೆ ನೀಡಿ ಜನರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಲಾಗುತ್ತಿದೆ.
ಜನರ ವಿಶ್ವಾಸ ಮತ್ತು ಆಶೀರ್ವಾದವೇ ಅಭಿವೃದ್ಧಿ ಕಾರ್ಯಗಳಿಗೆ ಶಕ್ತಿ. ಜನರ ನಿರೀಕ್ಷೆಗಳಿಗೆ ತಕ್ಕಂತೆ ಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ನಮ್ಮ ಪ್ರಯತ್ನ ನಿರಂತರವಾಗಿರಲಿದೆ.
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಪಕ್ಷದ ಮುಖಂಡರು, ಗ್ರಾಮಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.





















