
ಚಿಕ್ಕಬಳ್ಳಾಪುರ,ಸೆ.೧೦-ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳು ಸಮೀಪಿಸುತ್ತಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಮನವಿ ಮಾಡಿದ್ದಾರೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ)ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳು ಮಲಿನಗೊಳ್ಳುತ್ತವೆ. ಇದರಿಂದ ಜಲಚರಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಹಿನ್ನೆಲೆಯಲ್ಲಿ ಇಂತಹ ವಿಗ್ರಹಗಳ ತಯಾರಿಕೆ, ಮಾರಾಟ, ಬಳಕೆ ಮತ್ತು ಜಲಮೂಲಗಳಲ್ಲಿ ವಿಸರ್ಜನೆಯನ್ನು ನಿಷೇಧಿಸಲಾಗಿದೆ.
ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, ೧೯೭೪ರ ಕಲಂ ೩೩(ಎ) ಅನ್ವಯ ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪಿ.ಒ.ಪಿ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಸಂಪನ್ಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಅವರು ಮನವಿ ಮಾಡಿದ್ದಾರೆ.
































