
ನವದೆಹಲಿ,ಅ.೨: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಇಂದು ಗೌರವ ನಮನ ಸಲ್ಲಿಸಿದರು.
ನವದೆಹಲಿಯ ರಾಜಘಾಟ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಗಾಂಧೀಜಿ ಪ್ರತಿಪಾದಿಸಿದ ಸತ್ಯ, ಅಹಿಂಸೆ, ಸರಳತೆ ಮತ್ತು ಸ್ವಚ್ಛತೆಯ ಮೌಲ್ಯಗಳನ್ನು ಸ್ಮರಿಸಿದ ಅವರು, ದೇಶದ ಜನರು ಗಾಂಧೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಗಾಂಧೀಜಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ವಹಿಸಿದ ಐತಿಹಾಸಿಕ ಪಾತ್ರ ಹಾಗೂ ಸಮಾಜದಲ್ಲಿ ಶಾಂತಿ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನೂ ದೇಶಾದ್ಯಂತ ಆಚರಿಸಲಾಯಿತು. ವಿಜಯ್ ಘಾಟ್‌ನಲ್ಲಿರುವ ಶಾಸ್ತ್ರಿ ಅವರ ಸ್ಮಾರಕಕ್ಕೆ ತೆರಳಿದ ಪ್ರಧಾನಿ ಮೋದಿ ಪುಷ್ಪನಮನ ಸಲ್ಲಿಸಿದರು.
ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಗೆ ಹೆಸರಾಗಿದ್ದರು. ೧೯೬೫ರ ಭಾರತ?ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿದ್ದ ಅವರು, ರೈತರು ಮತ್ತು ಸೈನಿಕರ ಮಹತ್ವವನ್ನು ಸಾರುವ ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಮೂಲಕ ಜನರಲ್ಲಿ ರಾಷ್ಟ್ರಭಕ್ತಿ ಹಾಗೂ ಆತ್ಮವಿಶ್ವಾಸ ಮೂಡಿಸಿದ್ದರು.
ಗಾಂಧೀಜಿ ಮತ್ತು ಶಾಸ್ತ್ರಿ ಅವರ ಜಯಂತಿ ಒಂದೇ ದಿನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಬ್ಬರು ನಾಯಕರ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಅವರ ಜೀವನಮೌಲ್ಯಗಳು ಇಂದಿಗೂ ದೇಶದ ಜನರಿಗೆ ಪ್ರೇರಣೆಯಾಗಿವೆ ಎಂದು ಹೇಳಿದರು.
ದೇಶದಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಗಾಂಧೀಜಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸ್ವಚ್ಛತಾ ಅಭಿಯಾನ, ಪ್ರಾರ್ಥನಾ ಸಭೆ ಹಾಗೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿವೆ.






















