
ಯಾದಗಿರಿ.ಅ.18: ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಜೀವ ಬೆದರಿಕೆ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಯಾದಗಿರಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಯಾದಗಿರಿ ಮಹಿಳಾ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಆರೋಪಗಳಿವೆ. ಜೂನ್ 1 ರಂದು ಬೆಳಗಿನ ಜಾವ 1ರಿಂದ 3 ಗಂಟೆಯ ಅವಧಿಯಲ್ಲಿ ಸಂತ್ರಸ್ತ ಮಹಿಳೆಯನ್ನು ಯಾದಗಿರಿ ರೈಲ್ವೆ ನಿಲ್ದಾಣದ ಸಮೀಪದ ಮನೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಜೂನ್ 2ರಿಂದ ವಿವಿಧ ದಿನಾಂಕಗಳಲ್ಲಿ ಬೇರೆ ಬೇರೆ ಲಾಡ್ಜ್ಗಳು ಹಾಗೂ ಅರಣ್ಯ ಪ್ರದೇಶಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಪ್ರಕರಣದಲ್ಲಿದೆ.
ಮೂವರು ಆರೋಪಿಗಳ ಬಂಧನ:
ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲು ಅಲಿಯಾಸ್ ಮಲ್ಲಪ್ಪ ಶರಣಪ್ಪ ಹೊಸಮನಿ, ಮಲ್ಲಿಂಗೌಡ ಧರ್ಮರಾಯ ಹಾಗೂ ಮಹೇಶ ಹಣಮಂತರಾಯ ಕಾಳೂರು ಅವರನ್ನು ಬಂಧಿಸಲಾಗಿದೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. ಶರಣಪ್ಪ ನಾಗಪ್ಪ ಪೂಜಾರಿ, ಆಕಾಶ ಅಲಿಯಾಸ್ ಪಪ್ಪು ಮಹಾದೇವ ಹಾಗೂ ಹರ್ಷ ಅಲಿಯಾಸ್ ಸುಧಾಕರ ಅಮೃತ ಎಂಬ ಇತರ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎ. ಈರಣ್ಣ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ಸಾಕ್ಷ್ಯಾಧಾರಗಳು, ದಾಖಲೆಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಗಳು ಬರುವುದು ಬಾಕಿಯಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯನಾಶದ ಸಾಧ್ಯತೆ ಇರುವುದನ್ನು ಪರಿಗಣಿಸಿ ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.
ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.























