
ಯಾದಗಿರಿ,ಆ.೫- ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೇಚೂರು ಸಮೀಪದ ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೋರೇಟರಿ ಕಂಪನಿಯಲ್ಲಿ ಇಂದು ಸಂಭವಿಸಿದ ಭೀಕರ ಗ್ಯಾಸ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಂಪನಿಯೊಳಗೆ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಗ್ಯಾಸ್ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಏಳು ಕಾರ್ಮಿಕರು ದುರಂತಕ್ಕೆ ಒಳಗಾಗಿದ್ದು, ಅವರಲ್ಲಿ ಮೂವರು ಸ್ಥಳದಲ್ಲೇ ಅಥವಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಮೃತಪಟ್ಟ ಮೂವರು ಕಾರ್ಮಿಕರೂ ಬಿಹಾರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ನಾಲ್ವರನ್ನು ತಕ್ಷಣವೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದ್ದು, ಈ ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


































