
ಬೆಂಗಳೂರು, ಜು.೧೭- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಗಡುವು ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ ೩೧ರೊಳಗೆ ಚುನಾವಣೆ ನಡೆಸುವಂತೆ ನೀಡಿದ್ದ ನಿರ್ದೇಶನವನ್ನು ಪರಿಷ್ಕರಿಸಿ, ಇದೀಗ ಡಿಸೆಂಬರ್ ೩೧, ೨೦೨೬ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ್ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿತು.
ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIಖ) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿಯನ್ನು ನಿಯೋಜಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಅರ್ಜಿಯಲ್ಲಿ, ಬೆಂಗಳೂರು ನಗರದಲ್ಲಿ ಸುಮಾರು ೧.೦೩ ಕೋಟಿ ಮತದಾರರು ಹಾಗೂ ೪೦ ಲಕ್ಷ ಮನೆಗಳಿದ್ದು, ಮನೆಮನೆಗೆ ತೆರಳಿ ಮತದಾರರ ವಿವರ ಪರಿಶೀಲಿಸುವ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರತರಾಗಿದ್ದಾರೆ.
ಇದೇ ವೇಳೆ ಐದು ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಭದ್ರತಾ ಸಿಬ್ಬಂದಿಯನ್ನು ಹೊರತುಪಡಿಸಿ ಸುಮಾರು ೬೦ ಸಾವಿರ ಸಿಬ್ಬಂದಿ ಅಗತ್ಯವಿರುವುದರಿಂದ, ಎರಡೂ ಪ್ರಕ್ರಿಯೆಗಳನ್ನು ಏಕಕಾಲದಲ್ಲಿ ನಿರ್ವಹಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಸರ್ಕಾರ ವಾದಿಸಿತು.
ಇನ್ನೊಂದೆಡೆ, ಜಿಬಿಎ ಚುನಾವಣೆ ಯಾವುದೇ ಕಾರಣಕ್ಕೂ ಮತ್ತೆ ಮುಂದೂಡಬಾರದು ಎಂದು ಬಿಜೆಪಿ ಕೂಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿತ್ತು.
ಎರಡೂ ಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್, ಎಸ್‌ಐಆರ್ ಪ್ರಕ್ರಿಯೆಯಿಂದ ಉಂಟಾಗಿರುವ ಆಡಳಿತಾತ್ಮಕ ಸವಾಲುಗಳನ್ನು ಪರಿಗಣಿಸಿ, ೨೦೨೬ರ ಡಿಸೆಂಬರ್ ೩೧ರೊಳಗೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಅವಕಾಶ ನೀಡಿದೆ.

































