
ಬೆಂಗಳೂರು, ಮೇ. ೨೦- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ಆಗಸ್ಟ್ ೩೧ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ. ಇದೇ ಕೊನೆಯ ಅವಕಾಶವಾಗಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ನೀಡುವುದಿಲ್ಲ ಎಂದು ನ್ಯಾಯಪೀಠ ಎಚ್ಚರಿಸಿದೆ.
ಈ ತೀರ್ಪಿನ ಪರಿಣಾಮವಾಗಿ ಇದೇ ಜೂನ್ ೩೦ರೊಳಗೆ ನಡೆಯಬೇಕಿದ್ದ ಜಿಬಿಎ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ.
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದು ಹಾಗೂ ಚುನಾವಣಾ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರದ ಮನವಿ ಮೇರೆಗೆ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಈ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ .
ನ್ಯಾಯಮೂರ್ತಿ ಜಾಯ್ ಮಲ್ಯ ಬಾಗ್ವಿ.ಹಾಗೂ ವಿಪುಲ್ ಎಂ ಪಂಚೋಲಿ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಪರಿಗಣಿಸಿದ ನ್ಯಾಯಪೀಠ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಬರುವ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಕೊನೆಯ ಬಾರಿಗೆ ಆಗಸ್ಟ್ ೩೧ರವರೆಗೆ ಕಾಲಾವಕಾಶ ನೀಡಿತು.
ಈ ಹಿಂದೆ ಜೂನ್ ೩೦ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ್ದ ಸುಪ್ರೀಂ ಕೋರ್ಟ್, ಇದೀಗ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆ ಹೆಚ್ಚುವರಿ ಸಮಯ ನೀಡಿದರೂ, “ಮುಂದೆ ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಲು ಅವಕಾಶ ನೀಡುವುದಿಲ್ಲ” ಎಂದು ಸ್ಪಷ್ಟ ಎಚ್ಚರಿಕೆ ನೀಡಿದೆ.
ಜಿಬಿಎ ಚುನಾವಣೆಗೆ ಸೆಪ್ಟೆಂಬರ್ ಅಂತ್ಯದವರೆಗೆ ಅವಕಾಶ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿದ್ದರೆ, ಅಡ್ವೊಕೇಟ್ ಜನರಲ್ ಎ. ಶಶಿಕಿರಣ್ ಶೆಟ್ಟಿ ಅವರು ಸೆಪ್ಟೆಂಬರ್‌ವರೆಗೆ ಕಾಲಾವಕಾಶ ಕೋರಿ ಮನವಿ ಸಲ್ಲಿಸಿದ್ದರು.
ಆದರೆ ರಾಜ್ಯ ಚುನಾವಣಾ ಆಯೋಗಕ್ಕೆ ಒಂದು ತಿಂಗಳು ಹಾಗೂ ರಾಜ್ಯ ಸರ್ಕಾರಕ್ಕೆ ಇನ್ನೊಂದು ತಿಂಗಳು ಸೇರಿ ಒಟ್ಟು ಎರಡು ತಿಂಗಳ ಕಾಲಾವಕಾಶ ಸಾಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಆಗಸ್ಟ್ ೩೧ರೊಳಗೆ ಚುನಾವಣೆ ನಡೆಸಲೇಬೇಕು ಎಂದು ಗಡುವು ನೀಡಿ ವಿಚಾರಣೆಯನ್ನು ಮುಂದೂಡಿತು.























