
ಯಾದಗಿರಿ:ಜು.8: ಜಿಲ್ಲೆಯಲ್ಲಿ ಈ ಬಾರಿ ಮಳೆಯ ಅಭಾವ ತೀವ್ರವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಬೆಳೆ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಅಡಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ರೈತರಿಗೆ ಸಲಹೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರೈತರು ಬೆಳೆ ನಷ್ಟದ ಸಂದರ್ಭದಲ್ಲಿ ಪರಿಹಾರದಿಂದ ವಂಚಿತರಾಗದಂತೆ ಮುಂಜಾಗ್ರತಾ ಕ್ರಮವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಬೆಳೆ ವಿಮೆ ಸಂಬಂಧ ಕೃಷಿ ಇಲಾಖೆಯಿಂದ ಸಂಪೂರ್ಣ ಮಾಹಿತಿ ಪಡೆದು, ಗ್ರಾಮ ಮಟ್ಟದ ಅಧಿಕಾರಿಗಳು, ನಾಡ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳ (ಎಒ) ಮಾರ್ಗದರ್ಶನದಲ್ಲಿ ಪ್ರತಿ ಹೆಕ್ಟೇರ್‍ಗೆ ನಿಗದಿಪಡಿಸಿರುವ ವಿಮೆಯನ್ನು ಸಕಾಲದಲ್ಲಿ ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಸೌಲಭ್ಯವನ್ನು ಬಳಸಿಕೊಂಡು ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತರು ಉಳುಮೆ ಮಾಡಬಾರದು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಟೀಕಿಸಿದ ಮಾಗನೂರ, ರಾಜ್ಯದ ಶೇ.70ಕ್ಕೂ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬಿತ್ತನೆ ಮಾಡದಿದ್ದರೆ ಅವರ ಜೀವನ ನಿರ್ವಹಣೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಸರ್ಕಾರ ಬಿತ್ತನೆ ಮಾಡದಂತೆ ಸಲಹೆ ನೀಡುವುದಾದರೆ, ಪ್ರತಿ ಎಕರೆಗೆ ?50 ಸಾವಿರ ಪರಿಹಾರ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಇನ್ನೂ ಕೃಷಿ ಸಚಿವರ ನೇಮಕವಾಗದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ರೈತರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ತಕ್ಷಣವೇ ಕೃಷಿ ಸಚಿವರನ್ನು ನೇಮಿಸಿ ರೈತರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಹುಪಾಲು ಶಾಸಕರಿದ್ದರೂ ರೈತರ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬರುತ್ತಿಲ್ಲ ಎಂದು ಅವರು ಆರೋಪಿಸಿದರು.
ಅನ್ನಭಾಗ್ಯ ಯೋಜನೆಯಡಿ ನೀಡಬೇಕಾದ 5 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರದಿಂದ ಆಹಾರ ಧಾನ್ಯಗಳ ಪೂರೈಕೆ ನಡೆಯುತ್ತಿದೆ ಎಂದು ಹೇಳಿದರು.
ಸುರಪುರ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವಿದ್ದರೂ, ಜಲಾಶಯಕ್ಕೆ ನೀರಿನ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಸ್ತುತ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಕಾಯ್ದಿರಿಸಲಾಗಿದ್ದು, ಈಗಾಗಲೇ ಶೇ.95ರಷ್ಟು ರೈತರು ಅಲ್ಪ ಪ್ರಮಾಣದ ಮಳೆಯನ್ನು ನಂಬಿ ಬಿತ್ತನೆ ನಡೆಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಖುದ್ದಾಗಿ ಪರಿಶೀಲಿಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ರೈತರೊಂದಿಗೆ ವಿಶೇಷ ಸಭೆ ನಡೆಸಿ ಅವರ ಅಹವಾಲು ಆಲಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ತಕ್ಷಣವೇ ಬೆಳೆ ಹಾನಿಗೊಳಗಾದ ರೈತರಿಗೆ ವಿವಿಧ ಬೆಳೆಗಳಿಗೆ ಪ್ರತಿ ಎಕರೆಗೆ ?50 ಸಾವಿರ ಪರಿಹಾರ ಘೋಷಿಸಿ ಬಿಡುಗಡೆ ಮಾಡಬೇಕು ಎಂದು ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದರು.



























