
ಬೀದರ್: ಮಾ.೨೯:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ಸಮುದಾಯದವರು ಉಚಿತ ಕಾನೂನು ಸೇವೆಗಳ ಪ್ರಯೋಜನ ಪಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಹೇಳಿದರು.
ನಗರದ ಕೈಲಾಸನಗರದ ಬಸವ ಶಾಂತಿ ಮಂಟಪದಲ್ಲಿ ಶನಿವಾರ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸಂವಿಧಾನದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹಕ್ಕುಗಳು ಹಾಗೂ ರಕ್ಷಣೆ ಕೊಡಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಿವಿಧ ಕಾನೂನು ಸೇವೆಗಳು ಲಭ್ಯ ಇವೆ ಎಂದು ತಿಳಿಸಿದರು.
ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಪಾಟೀಲ ಮಾತನಾಡಿ, ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸಲು ಪ್ರತಿಯೊಬ್ಬರೂ ಕಾನೂನನ್ನು ಗೌರವಿಸಬೇಕು ಎಂದು ಹೇಳಿದರು.
ಹಿರಿಯ ವಕೀಲ ಬಿ.ಎಸ್. ಪಾಟೀಲ ಮಾತನಾಡಿ, ಪ್ರಾಧಿಕಾರದ ಉಚಿತ ಕಾನೂನು ಸೇವೆ ಸೌಲಭ್ಯ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ತಮ್ಮ ಸಮಸ್ಯೆ/ ವಿವಾದಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಹಿರಿಯ ವಕೀಲ ಎಂ.ಡಿ. ಅಬ್ದುಲ್ ವಹೀದ್, ಮಹಾನಗರ ಪಾಲಿಕೆ ಸದಸ್ಯ ರಾಜಾರಾಮ ಚಿಟ್ಟಾ ಮಾತನಾಡಿದರು.
ಆರ್.ವಿ. ಬಿಡಪ್ ಕಾಲೇಜು ಪ್ರಾಚಾರ್ಯ ಮುನಿಯಪ್ಪ ಟಿ. ಸ್ವಾಗತಿಸಿದರು. ಸಾಹಿಲ್ ಅಬ್ಬಾಸ್ ನಿರೂಪಿಸಿದರು. ಸಂತೋಷ್ ರಾಠೋಡ್ ವಂದಿಸಿದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಂಚಾಲಿತ ಆರ್.ವಿ. ಬಿಡಪ್ ಕಾನೂನು ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.























