
ಬೀದರ್ : ಜೂ.೨೩:ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ರೈತರು ನೈಸರ್ಗಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಡಾ.ರಾಜಶೇಖರ ಬಸನಾಯಕ ಹೇಳಿದರು.
ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಕೆವಿಕೆ ಬೀದರ್ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಸಹಭಾಗಿತ್ವದಲ್ಲಿ ನಡೆದ ನೈಸರ್ಗಿಕ ಕೃಷಿ ಕುರಿತು ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗಳು ಮಣ್ಣಿನ ಆರೋಗ್ಯ ಕಾಪಾಡುವುದರ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಉತ್ಪಾದನೆಗೆ ಸಹಕಾರಿಯಾಗುತ್ತವೆ. ಈ ವಿಧಾನದಲ್ಲಿ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕೃಷಿ ನಡೆಸುವುದರಿಂದ ವೆಚ್ಚ ಕಡಿಮೆಯಾಗುತ್ತದೆ ಹಾಗೂ ರೈತರ ಆದಾಯ ಹೆಚ್ಚಾಗಲು ನೆರವಾಗುತ್ತದೆ ಎಂದರು.
ಈ ಕಾರ್ಯಾಗಾರದಲ್ಲಿ ಸುಮಾರು ೧೭೦ ರೈತರು ರೈತ ಮಹಿಳೆಯರು ಹಾಗೂ ಗ್ರಾಮೀಣ ಭಾಗದ ಯುವಕರು ಭಾಗವಹಿಸಿ ನೈಸರ್ಗಿಕ ಹಾಗೂ ಸಾವಯವ ಕೃಷಿ ಕುರಿತು ಹೆಚ್ಚಿನ ಮಾಹಿತಿ ಪಡೆದರು, ಅಲ್ಲದೆ ನೈಸರ್ಗಿಕ ಕೃಷಿಯಲ್ಲಿ ಬಳಸಬಹುದಾದ ವಿವಿಧ ಕೃಷಿ ಪರಿಕರಗಳ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿ ರೈತರಿಗೆ ಉಪಯುಕ್ತ ಮಾಹಿತಿ ಪಡೆದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ ಹಾಗೂ ಹಣಮಂತರಾವ ಪಾಟೀಲ ಅವರು ಮಾತನಾಡಿ ರೈತರು ಪರಿಸರ ಸ್ನೇಹಿ ಹಾಗೂ ಆರೋಗ್ಯಕರ ಆಹಾರ ಉತ್ಪಾದನೆಗಾಗಿ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.




























