
ಕಲಬುರಗಿ,ಡಿ.19: ಸಾಮಾಜಿಕ ಹಾಗೂ ಆರ್ಥಿಕ ಹಿನ್ನೆಲೆ ಏನೇ ಆಗಿದ್ರೂ ಸಹ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದನ್ನು ಆರೋಗ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಅದನ್ನು ಇಲಾಖೆ ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ತಿಳಿಸಿದರು.
ಬುಧವಾರ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವವರುಗಳ ಸಂಯುಕ್ತಾಶ್ರಯದಲ್ಲಿ ಡಿ.ಎಚ್.ಓ. ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಾರ್ವತ್ರಿಕ ಆರೋಗ್ಯ ರಕ್ಷಣಾ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷವಾಗಿ ಅನಕ್ಷರಸ್ಥರು, ಬಡವರು ಮತ್ತು ಹಿಂದುಳಿದ ಜನರಿಗೆ ಆರೋಗ್ಯದ ಕುರಿತು ಹೆಚ್ಚಿನ ಅರಿವು ಮೂಡಿಸಬೇಕಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವೈದ್ಯ ಸಿಬ್ಬಂದಿಗಳು ಇದನ್ನು ಇತರೆ ವೃತ್ತಿಯಂತೆ ನೋಡದೆ ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಅವರು ಪ್ರಾಸ್ತಾವಿಕ ಮಾತನಾಡಿ, ಆರೋಗ್ಯವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಮಾನವ ಹಕ್ಕಿನಲ್ಲಿ ಒಂದಾಗಿದೆ. ಕೈಗೆಟುಕುವ ಮತ್ತು ಗುಣಮಟ್ಟದ ಸಮಾನ ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಒದಗಿಸುವ ಸಂಕಲ್ಪದೊಂದಿಗೆ ಇಂದಿಲ್ಲಿ ಅಂತರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ರಕ್ಷಣಾ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಕಾರ್ಯಕ್ರಮ ಅನುμÁ್ಠನ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ ಪ್ರಯತ್ನದ ಫಲವಾಗಿ ಇಂದು ಕಲಬುರಗಿ ಜಿಲ್ಲೆ ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸುವ ಜಿಲ್ಲೆಗಳ ಸಾಲಿನಲ್ಲಿ ನಿಂತಿದೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ದೀಪಕ ಸುಕೆ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ. ರವಿಕಾಂತಿ ಕ್ಯಾತನಾಳ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಸಿದ್ರಾಮಪ್ಪಾ ಪಾಟೀಲ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಚಂದ್ರಕಾಂತ ನರಿಬೋಳ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಶರಣಪ್ಪ ಭೂಸನೂರ, ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳು ಡಾ. ರಾಕೇಶ ಕಾಂಬಳೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳು, ಕಾರ್ಯಕ್ರಮ ವ್ಯವಸ್ಥಾಪಕರು, ಸಮಾಲೋಚಕರು, ಸಂಯೋಜಕರು, ಆರೋಗ್ಯ ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.























