
ಸಂಜೆ ವಾಣಿ ವಾರ್ತೆ |
ಜಮಖಂಡಿ: ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಪ್ರಜಾಸೇವಾ ಆಂದೋಲನ-ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಶನಿವಾರ ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.
ತಾಲೂಕು ಆಡಳಿತ ಹಾಗೂ ಪ್ರಜಾಸೇವಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವುದು ಈ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದರು.
ಸರ್ಕಾರದ ಸೇವೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು. ಅಧಿಕಾರಿಗಳು ತಮ್ಮ ಅಧಿಕಾರವನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ವಿಳಂಬವಿಲ್ಲದೆ ಬಗೆಹರಿಸಬೇಕು. ಈ ರೀತಿಯ ಕಾರ್ಯಕ್ರಮಗಳು ಪ್ರತಿ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಭೆ
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾತನಾಡಿ, ಸರ್ಕಾರದ ವಿವಿಧ ಸೇವೆಗಳನ್ನು ಸಾರ್ವಜನಿಕರು ಇರುವ ಸ್ಥಳಕ್ಕೆ ತೆರಳಿ ಒದಗಿಸುವುದು ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಇತ್ತೀಚೆಗೆ ಪ್ರಜಾಸೇವಾ ಇಲಾಖೆಯನ್ನು ಆರಂಭಿಸಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಬಹಳ ವರ್ಷಗಳಿಂದ ವಿವಿಧ ಕಾರಣಗಳಿಂದ ಬಾಕಿ ಉಳಿದಿರುವ ಸಾರ್ವಜನಿಕರ ಸಮಸ್ಯೆಗಳನ್ನು ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮನ್ವಯದೊಂದಿಗೆ ಪರಿಹರಿಸಲು ಪ್ರಯತ್ನಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಶನಿವಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಅಧಿಕಾರಿಗಳು ಹಾಜರಾಗಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ವೇಳಾಪಟ್ಟಿಯನ್ನು ಮುಂಚಿತವಾಗಿ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.
ನಿಗದಿತ ಕಾಲಮಿತಿಯಲ್ಲಿ ಸಮಸ್ಯೆ ಪರಿಹಾರ
ತಹಶೀಲ್ದಾರ್ ಅನೀಲ ಬಡಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಸೇವಾ ಆಂದೋಲನದಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಅದೇ ದಿನ ಪರಿಹರಿಸುವುದು ಹಾಗೂ ತಕ್ಷಣ ಪರಿಹರಿಸಲು ಸಾಧ್ಯವಾಗದ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನೊಳಗೆ ನಿಗದಿತ ಕಾಲಮಿತಿಯಲ್ಲಿ ಬಗೆಹರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ತಿAಗಳ ನಾಲ್ಕು ಶನಿವಾರಗಳಲ್ಲೂ ವಿವಿಧ ಹಂತಗಳಲ್ಲಿ ಸಭೆಗಳನ್ನು ಆಯೋಜಿಸಲಾಗುವುದು. ತಾಲೂಕು ಮಟ್ಟದಲ್ಲಿ ಉಸ್ತುವಾರಿ ಸಚಿವರ ಲಭ್ಯತೆಗೆ ಅನುಗುಣವಾಗಿ ಮೊದಲ ಮತ್ತು ಮೂರನೇ ಶನಿವಾರಗಳಲ್ಲಿ ಸಭೆ ನಡೆಯಲಿದೆ. ಉಳಿದ ಶನಿವಾರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುವುದು ಎಂದು ವಿವರಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಐಪಿಜಿಆರ್ಎಸ್ (IPಉಖS) ಪೋರ್ಟಲ್ನಲ್ಲಿ ನೋಂದಣಿ ಮಾಡಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿಯೇ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ದಾಖಲಿಸಿದ ಬಳಿಕ ಅರ್ಜಿ ಸಂಖ್ಯೆಯ ಚೀಟಿ ಪಡೆಯಲಿದ್ದಾರೆ. ನಂತರ ಸಂಬAಧಪಟ್ಟ ಇಲಾಖೆಯ ಅಧಿಕಾರಿಯನ್ನು ಕರೆಸಿ, ಶಾಸಕರ ಸಮ್ಮುಖದಲ್ಲಿ ಸಮಸ್ಯೆಯನ್ನು ಪರಿಶೀಲಿಸಿ, ಸಾಧ್ಯವಿರುವ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಅರ್ಜಿಯು ಆನ್ಲೈನ್ನಲ್ಲಿ ದಾಖಲಾಗುವುದರಿಂದ ಸಾರ್ವಜನಿಕರು ತಮ್ಮ ಅರ್ಜಿ ಸಂಖ್ಯೆಯ ಮೂಲಕ ನಂತರವೂ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು. ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಹಾಜರಿದ್ದು, ತಮ್ಮ ಇಲಾಖೆಗೆ ಸಂಬAಧಿಸಿದ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಗೇರ, ನಗರಸಭೆ ಪೌರಾಯುಕ್ತ ಜ್ಯೋತಿಗಿರೀಶ, ಹುನ್ನೂರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ನರೇಂದ್ರ ಕೆಂಪ್ಪಣ್ಣ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಡಾ.ಎನ್.ವ್ಹಿ.ಅಸ್ಕಿ ನಿರೂಪಿಸಿ ವಂದಿಸಿದರು


























