
ಬೆಂಗಳೂರು, ನ.6-ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿಟನ್ ಕಬ್ಬಿಗೆ 3,300 ರೂಪಾಯಿ ನಿಗದಿ ಮಾಡಿದೆ. ಕಬ್ಬಿಗೆ ಹೆಚ್ಚಿನ ದರ ನಿಗದಿ ಮಾಡುವಂತೆ ಬೆಳೆಗಾರರು 9 ದಿನಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕಡೆಗೂ ಫಲ ಸಿಕ್ಕಿದೆ.
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆದ ಸುದೀರ್ಘ ಮಾತುಕತೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
3,300 ರೂಪಾಯಿಯಲ್ಲಿ ಕಾರ್ಖಾನೆಗಳು 3,250 ರೂ. ನೀಡಬೇಕಾಗುತ್ತದೆ. ಸರ್ಕಾರ ಸಹಾಯಧನವಾಗಿ 50 ರೂ. ನೀಡಲಿದೆ. ಈ ಪೈಕಿ 3,200 ರೂಪಾಯಿಯನ್ನ ಕಾರ್ಖಾನೆಗಳು ಒಂದೇ ಕಂತಿನಲ್ಲಿ ಕೊಡಬೇಕು. ಉಳಿದ 50 ರೂ. 6 ತಿಂಗಳ ನಂತರ ಕಾರ್ಖಾನೆಗಳು ಕೊಡಬೇಕು. 50 ರೂ. ಸಹಾಯಧನ ಸರ್ಕಾರ ನೀಡಲಿದೆ.
ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸರ್ಕಾರ ರೈತರು ಮತ್ತು ಕಾರ್ಖಾನೆ ಮಾಲೀಕರ ಜೊತೆ ಸಂಧಾನ ನಡೆಸಿತ್ತು. ರೈತರು ಮತ್ತು ಕಾರ್ಖಾನೆ ಮಾಲೀಕರು ತಮ್ಮ ಹಠದಿಂದ ಹಿಂದಕ್ಕೆ ಸರಿಯಾದ ಕಾರಣ ಜಟಿಲವಾಗಿತ್ತು. ಈಗ ಸರ್ಕಾರ 50 ರೂ. ನೀಡುವುದಾಗಿ ಹೇಳಿದ ನಂತರ ಮಾಲೀಕರು ಪಟ್ಟು ಸಡಿಲಿಸಿ 50 ರೂ. ನೀಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಸಭೆಯ ಪ್ರಮುಖ ಅಂಶಗಳು
ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್‌ಆರ್‌ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.
ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್‌ಆರ್‌ಪಿ ನಿಗದಿಪಡಿಸಿದೆ. ಈ ಎಫ್‌ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್‌ಪಿ ಹೆಚ್ಚಳ ಮಾಡಿಲ್ಲ.
ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.
ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಲಾಗಿದೆ.
ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.
ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

























