
ಚಿಕ್ಕಬಳ್ಳಾಪುರ, ಸೆ.೦೯ – ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ೨೦೨೬ನೇ ಸಾಲಿನ ಮೂರನೇ ಬೃಹತ್ ಲೋಕ ಅದಾಲತ್ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೯ ರಂದು ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ರಾಜಿಯಾಗಬಲ್ಲ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಲೋಕ ಅದಾಲತ್ ಕುರಿತ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ನ್ಯಾಯಾಲಯಗಳಲ್ಲಿ ೫೧,೪೮೩ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು,ಈ ಬಾರಿ ಲೋಕ ಅದಾಲತ್‌ನಲ್ಲಿ ವಿಚಾರಣೆಗೆ ೯,೦೦೦ಕ್ಕೂ ಹೆಚ್ಚು ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ.ಸೆ.೧೮ರವರೆಗೆ ಇನ್ನಷ್ಟು ಪ್ರಕರಣಗಳು ಲೋಕ ಅದಾಲತ್‌ಗೆ ಸೇರುವ ನಿರೀಕ್ಷೆಯಿದೆ.
ಕಳೆದ ಜು.೧೧ ರಂದು ನಡೆದ ಲೋಕ ಅದಾಲತ್ ನಲ್ಲಿ ಬಾಕಿ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಒಟ್ಟು ೧,೩೯,೬೪೮ ಪ್ರಕರಣಗಳನ್ನು ಕೈಗೆತ್ತಿಕೊಂಡು ೧,೩೭,೦೧೩ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು.ಈ ಬಾರಿ ಅದಕ್ಕಿಂತ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿಯನ್ನು ಹೊಂದಲಾಗಿದೆ ಎಂದರು.
ಲೋಕ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಮತ್ತು ಕುಟುಂಬ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ಸೇವಾ ಪ್ರಕರಣಗಳು, ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶವಿದೆ ಎಂದು ತಿಳಿಸಿದರು.
ನ್ಯಾಯಾಲಯದಲ್ಲಿ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಲೋಕ ಅದಾಲತ್ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಉಭಯ ಕಕ್ಷಿದಾರರ ಒಪ್ಪಿಗೆಯೊಂದಿಗೆ ಪ್ರಕರಣ ಇತ್ಯರ್ಥವಾಗುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ, ಕಕ್ಷಿದಾರರ ನಡುವಿನ ವೈಮನಸ್ಸು ಕಡಿಮೆಯಾಗಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದರು.
































