Home ಜಿಲ್ಲೆ ಬೆಂಗಳೂರು ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಬೆಂಗಳೂರು, ಏ.೧೮– ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕೇಂದ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

೧೯೯೬ ಮತ್ತು ೨೦೨೬; ಕರಾಳ ಇತಿಹಾಸ ಮರುಕಳಿಸಿದೆ. ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ೩೩% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು.

ಇಂದು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.
ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. ೩೩% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು ಹೆಚ್‌ಡಿಕೆ ಪ್ರತಿಜ್ಞೆ ಮಾಡಿದ್ದಾರೆ.