Home ಜಿಲ್ಲೆ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಔರಾದ್ : ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ
ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್)
ಕೆಲಸ ನಿರ್ವಹಿಸುವ ಅಕುಶಲ ಕೂಲಿ ಕಾರ್ಮಿಕರಿಗೆ ಭಾನುವಾರ ಆರೋಗ್ಯ ತಪಾಸಣೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ ಅವರು ಮಾತನಾಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದು, ಅವರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದರು.

ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿ ದೈಹಿಕ ಶ್ರಮದ ಕೆಲಸ ಮಾಡುತ್ತಿರುವುದರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲೂರೆ, ಅವರು ಮಾತನಾಡಿ, ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಈ ಸಂಧರ್ಭದಲ್ಲಿ ಅನಿತಾ ಬಿಎಲ್‍ಒ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಕಿಶೋರ, ಮಹಾದೇವ ಡಾವರಗಾವೆ, ಡಿಇಒ ಪ್ರಕಾಶ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಶರಣಬಸಪ್ಪ ಸಾವಳೆ, ಎನ್ ಆರ್ ಎಲ್ ಎಮ್ ಸಿಬ್ಬಂದಿಯವರು, ಜಿಕೆಎಮ್, ಆರೋಗ್ಯ ಇಲಾಖೆ ಸಿಬ್ಬಂದಿಯವರು ಹಾಗೂ ಕೂಲಿಕಾರ್ಮಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.


330 ಕೂಲಿಕಾರ್ಮಿಕರ ಆರೋಗ್ಯ ತಪಾಸಣೆ :

ಆರೋಗ್ಯ ಇಲಾಖೆ ಸಿಬ್ಬಂದಿ ಸಹಯೋಗದಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ರಕ್ತದಲ್ಲಿ ಹಿಮೋಗ್ಲೊಬಿನ್ ಪ್ರಮಾಣ, ತೂಕ, ಶೀತ, ಕೆಮ್ಮು, ನೆಗಡಿಯಂತಹ ಕಾಯಿಲೆಗಳ ತಪಾಸಣೆ ಮಾಡಲಾಯಿತು. ಪುರುಷರು, ಮಹಿಳೆಯರು ಸೇರಿದಂತೆ ಒಟ್ಟು 330 ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಗಿದೆ.