
ಬೆಂಗಳೂರು, ಮೇ ೨೦ – ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆದಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಭಾಗದಲ್ಲಿ ಎದ್ದಿರುವ ಚಂಡಮಾರುತ ವೈಪರೀತ್ಯದಿಂದಾಗಿ ಮುಂದಿನ ೫ ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ. ಕೆಲವು ಈ ಜಿಲ್ಲೆಗಳಲ್ಲಿ ಇಂದಿನಿಂದ (ಮೇ ೨೦-೨೩) ಮೂರು ದಿನಗಳವರೆಗೆ ಭಾರೀ ಮಳೆಯಾಗಲಿವೆ. ಗರಿಷ್ಠ ೨೦೦ ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ೩ ಗಂಟೆಗಳಲ್ಲಿ ರಾಜ್ಯ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ರಾಜಧಾನಿಗೆ ಹಳದಿ ಎಚ್ಚರಿಕೆ
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇತ್ತೀಚಿನ ಮಳೆಯಿಂದಾಗಿ ಈಗಾಗಲೇ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ನಗರದಲ್ಲಿ ಮಂಗಳವಾರ ಮತ್ತೆ ಮಳೆಯಾಗಿದೆ. ಬಿಬಿಎಂಪಿ ಸರಿಪಡಿಸುವ ಕ್ರಮ ಕೈಗೊಂಡಿದೆ. ಆದರೆ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂದು ಬೆಂಗಳೂರಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಆದ್ದರಿಂದ, ಭಾರತೀಯ ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶದಲ್ಲಿ ವರುಣ ಅರ್ಭಟ ಹೆಚ್ಚಾಗಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಒಟ್ಟು ಆರು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ನಿಟ್ಟಿನಲ್ಲಿ ಐಎಂಡಿ ರೆಡ್ ಅಲರ್ಟ್ ನೀಡಿದೆ. ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ೧೧೦ ರಿಂದ ೨೦೦ ಮಿ.ಮೀ ಮಳೆಯಾಗುವ ನಿರೀಕ್ಷೆ ಇದೆ.
ಆದ್ದರಿಂದ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಒಟ್ಟಾರೆಯಾಗಿ, ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಐದು ದಿನಗಳವರೆಗೆ ೨೦ ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆನೀಡಲಾಗಿದೆ. ಹೆಚ್ಚುವರಿಯಾಗಿ, ಕೊಡಗು ಮತ್ತು ಮಡಿಕೇರಿ ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.