
ಬೆಂಗಳೂರು, ಏ. ೧೭- ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದು, ಸಂಪುಟ ಪುನಾರಚನೆ ಕೂಗು ಬಲವಾಗಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿ ಮಾಡಿ ರಾಜ್ಯ ಕಾಂಗ್ರೆಸ್‌ನಲ್ಲಿರುವ ಗೊಂದಲಗಳ ನಿವಾರಣೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ.
ರಾಜ್ಯದ ಐಟಿಬಿಟಿ ಇಲಾಖೆ ದೆಹಲಿಯಲ್ಲಿ ಇಂದು ಸಂಜೆ ಆಯೋಜಿಸುವ ವಿವಿಧ ದೇಶಗಳ ರಾಯಭಾರಿಗಳ ಸಮಾವೇಶವಾದ ಬ್ರಿಡ್ಜ್-೨ ಬೆಂಗಳೂರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಿದರು.
ರಾಜ್ಯದಲ್ಲಿ ಉಪಚುನಾವಣೆಗಳು ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ಪುನಾರಚನೆಗೆ ಆಗ್ರಹಿಸಿ ಸುಮಾರು ೧೫ ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ ಶಾಸಕರು ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಮೊಕ್ಕಾಂ ಹೂಡಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಳೆದ ೩ ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಸ್ಪಷ್ಟ ನಿಲುವು ಪ್ರಕಟಿಸುವಂತೆ ಆಗ್ರಹಿಸಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದು, ವರಿಷ್ಠ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಇದೆ.
ರಾಜ್ಯದ ಐಟಿ ಇಲಾಖೆಯ ಕಾರ್ಯಕ್ರಮ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರುಗಳು ಪ್ರತ್ಯೇಕವಾಗಿ ವರಿಷ್ಠ ನಾಯಕರುಗಳನ್ನು ಭೇಟಿ ಮಾಡಿ ಚರ್ಚೆ ನಡೆಸುವರು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದ್ದು, ಸಂಪುಟ ಪುನಾಚರನೆಗೆ ಹಿರಿಯ, ಕಿರಿಯ ಶಾಸಕರು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವರಿಷ್ಠರ ಬಳಿ ಸಂಪುಟ ಪುನಾರಚನೆಗೆ ಅನುಮತಿ ಕೇಳುವ ಸಾಧ್ಯತೆ ಹೆಚ್ಚಿದೆ.
ನಾಯಕತ್ವ ಬದಲಾವಣೆ ವಿಚಾರ ಇತ್ಯರ್ಥವಾಗದೆ ಸಂಪುಟ ಪುನಾರಚನೆಗೆ ಅವಕಾಶ ಕೊಡಬಾರದು. ಮೊದಲು ನಾಯಕತ್ವ ಬದಲಾವಣೆ ವಿಚಾರವನ್ನು ಇತ್ಯರ್ಥಗೊಳಿಸಿ ಎಂದು ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ತಮ್ಮ ಅಹವಾಲನ್ನು ವರಿಷ್ಠರ ಬಳಿ ಮತ್ತೆ ಇಂದೂ ಸಹ ಮಂಡಿಸಲುವ ಎಂದು ಹೇಳಲಾಗಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಅಕ್ಟೋಬರ್‌ನಲ್ಲೆ ನಾಯಕತ್ವ ಬದಲಾವಣೆ ವಿಚಾರ ಬದಾವಣೆ ಮುನ್ನಲೆಗೆ ಬಂದು, ಪರ ವಿರೋಧ ಹೇಳಿಕೆಗಳು, ಸಚಿವರು ಹಾಗೂ ಶಾಸಕರುಗಳ ಡಿನ್ನರ್ ಸಭೆಗಳು ನಡೆದಿದ್ದು, ಕಾಂಗ್ರೆಸ್‌ನಲ್ಲಿ ಗೊಂದಲಗಳು ಸೃಷ್ಟಿಯಾಗಿತ್ತು.
ಹೈಕಮಾಂಡ್ ಮಾತ್ರ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಗೊಂದಲಗಳನ್ನು ಪರಿಹರಿಸುವ ಗೋಜಿಗೂ ಹೋಗಿರಲಿಲ್ಲ.
ಬಜೆಟ್ ಅಧಿವೇಶನ, ಉಪಚುನಾವಣೆಯ ಕಾರಣದಿಂದ ಯಾವುದೂ ಇತ್ಯರ್ಥವಾಗಿರಲಿಲ್ಲ. ಈಗ ಮತ್ತೆ ಈ ವಿಚಾರಗಳು ಕಾಂಗ್ರೆಸ್‌ನ ಆಂತರಿಕ ವಲಯದಲ್ಲಿ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ವಿಚಾರಗಳ ಬಗ್ಗೆ ಒಂದು ಸ್ಪಷ್ಟತೆಗೆ ಬರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ರವರ ಬಳಿ ಚರ್ಚಿಸಿ ಸದ್ಯದಲ್ಲೇ ರಾಜ್ಯ ಕಾಂಗ್ರೆಸ್‌ನ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇವೆ.























