Home Lead News ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೆ ತರಲಾಗಿದ್ದ ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಶಿಕ್ಷಣ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿದ್ದ ಸರ್ಕಾರದ ಕ್ರಮಕ್ಕೆ ನ್ಯಾಯಾಲಯ ತಡೆ ನೀಡಿದೆ.


ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ್ದ ಕ್ರಮವನ್ನು ರದ್ದುಗೊಳಿಸಿದೆ.


ಏನಿದು ಮೀಸಲಾತಿ ಹೆಚ್ಚಳ:
ಈ ಹಿಂದೆ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3ರಷ್ಟು ಮೀಸಲಾತಿ ಜಾರಿಯಲ್ಲಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಜನಸಂಖ್ಯೆಯ ಆಧಾರದ ಮೇಲೆ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.


ಸಮಿತಿಯ ವರದಿಗೆ ಸಂಬಂಧಿಸಿದಂತೆ ನಡೆದ ಸರ್ವಪಕ್ಷ ಸಭೆಯಲ್ಲಿ ಎಲ್ಲ ಪಕ್ಷಗಳೂ ಮೀಸಲಾತಿ ಹೆಚ್ಚಳದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದವು.


ಬೊಮ್ಮಾಯಿ ಸರ್ಕಾರ ಸುಗ್ರೀವಾಜ್ಞೆ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಒಟ್ಟು ಶೇ.18ರಿಂದ ಶೇ.24ಕ್ಕೆ ಹೆಚ್ಚಿಸುವ ಸಂಬಂಧ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿತ್ತು. ಈ ಸಂಬಂಧ ರಾಜ್ಯ ಸಚಿವ ಸಂಪುಟವು ಕರಡು ವಿಧೇಯಕಕ್ಕೆ ಅನುಮೋದನೆ ನೀಡಿದ ಬಳಿಕ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯಪಾಲರೂ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದ್ದರು.


ನಂತರ ಸರ್ಕಾರ ಅಧಿಕೃತ ರಾಜ್ಯಪತ್ರ ಪ್ರಕಟಿಸಿ, 103 ಉಪಜಾತಿಗಳನ್ನು ಒಳಗೊಂಡ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ 56 ಉಪಪಂಗಡಗಳನ್ನು ಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು.


50ರಿಂದ ಶೇ.56ಕ್ಕೆ ಏರಿಕೆ:
ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು. ಇದೀಗ ಈ ಮೀಸಲಾತಿ ಹೆಚ್ಚಳವನ್ನು ಹೈಕೋರ್ಟ್ ರದ್ದುಗೊಳಿಸಿರುವುದು ರಾಜ್ಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.