Home ಜಿಲ್ಲೆ ಬೆಂಗಳೂರು ಮಾನ್ಯತೆಯ ಗೌರವ: ವಿ. ಕೃಷ್ಣಪ್ಪರಿಗೆ ಶಾಸಕರಿಂದ ಅಭಿನಂದನೆ

ಮಾನ್ಯತೆಯ ಗೌರವ: ವಿ. ಕೃಷ್ಣಪ್ಪರಿಗೆ ಶಾಸಕರಿಂದ ಅಭಿನಂದನೆ

ಮಾಲೂರು, ನ.೪- ಮಾಲೂರಿನ ಮಹಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆ, ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಜರುಗಿದ ೭೧ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ತಾಲೂಕು ಪಂಚಾಯಿತಿ ನಿರ್ಗಮಿತ ಕಾರ್ಯನಿರ್ವಹಣಾಧಿಕಾರಿ ವಿ. ಕೃಷ್ಣಪ್ಪ ಅವರ ಸೇವೆಯನ್ನು ಶಾಸಕ ಕೆ.ವೈ. ನಂಜೇಗೌಡ ಅವರು ವಿಶೇಷವಾಗಿ ಅಭಿನಂದಿಸಿ ಶ್ಲಾಘಿಸಿದರು.


ವಿ. ಕೃಷ್ಣಪ್ಪ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಸುಮಾರು ಎಂಟು ವರ್ಷಗಳ ಕಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಲ್ಲಿಸಿದ ಕೊಡುಗೆ ಸ್ಮರಣೀಯವಾಗಿದ್ದು, ಅವರ ಅವಧಿಯಲ್ಲಿ ಕುಡಿಯುವ ನೀರಿನ ಸರಬರಾಜು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿತ್ತು ಎಂದು ಶಾಸಕರು ತಿಳಿಸಿದರು.


ವಿಶೇಷವಾಗಿ ಎಂಜಿಎನ್‌ಆರ್‌ಇಜಿಎ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವರು ನಿರಂತರ ಮಾರ್ಗದರ್ಶನ ನೀಡಿ ಅಭಿವೃದ್ಧಿಗೆ ಉತ್ತೇಜನ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಅಧಿಕಾರಿಗಳೊಂದಿಗೆ ಸೌಹಾರ್ದಯುತವಾಗಿ ವರ್ತಿಸುತ್ತಾ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ ವಿ. ಕೃಷ್ಣಪ್ಪ ಅವರು ಇತರೆ ಅಧಿಕಾರಿಗಳಿಗೂ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದ ಶಾಸಕರು, ಇತ್ತೀಚೆಗೆ ವರ್ಗಾವಣೆಗೊಂಡಿರುವ ಅವರು ಹೊಸ ಸ್ಥಳದಲ್ಲೂ ಅತ್ಯುತ್ತಮ ಸೇವೆ ಸಲ್ಲಿಸಿ ಮತ್ತಷ್ಟು ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದು ಹಾರೈಸಿದರು.


ಈ ರಾಜ್ಯೋತ್ಸವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ತಹಶೀಲ್ದಾರ್ ಎಂ.ವಿ. ರೂಪಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್, ಪೌರಾಯುಕ್ತ ಎಂ.ಎಸ್. ಮಹದೇವ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ. ಮುನೇಗೌಡ, ಕಸಾಪ ತಾಲೂಕು ಅಧ್ಯಕ್ಷ ಹನುಮಂತಯ್ಯ, ನಮ್ಮ ಕರ್ನಾಟಕ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಾಕನಹಳ್ಳಿ ನಾಗರಾಜ್ ಹಾಗೂ ತಾಲೂಕು ಅಧ್ಯಕ್ಷ ರವಿಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.